ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಬಿ. ವೈ. ವಿಜಯೇಂದ್ರ ಅವರನ್ನು ಮುಂದುವರಿಸಿದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, “ನಾನು ಎರಡು ಆಯ್ಕೆಗಳನ್ನು ಇರಿಸಿಕೊಂಡಿದ್ದೇನೆ. ಲೋಕಸಭಾ ಚುನಾವಣೆಗೆ ಮಾತ್ರ ಬಿಜೆಪಿಗೆ ಬೆಂಬಲ ನೀಡುತ್ತೇನೆ. ವಿಜಯೇಂದ್ರ ಅಧ್ಯಕ್ಷರಾಗಿ ಮುಂದುವರಿದರೆ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ನಮ್ಮ ಪ್ರತ್ಯೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ” ಎಂದು ಹೇಳಿದರು.
ಇತ್ತೀಚೆಗೆ ವಿಜಯೇಂದ್ರ ಅವರು ಪಕ್ಷದಲ್ಲಿ ಒಗ್ಗಟ್ಟು ಮೂಡಿಸಲು ಸಭೆಗಳನ್ನು ನಡೆಸುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, “ಹೌದು, ರಾಜ್ಯ ಬಿಜೆಪಿಯಲ್ಲಿ ಭಾರಿ ಒಗ್ಗಟ್ಟಿದೆ. ವಿಜಯೇಂದ್ರ ಬಂದ ನಂತರ ಒಗ್ಗಟ್ಟು ಇನ್ನಷ್ಟು ಹೆಚ್ಚಾಗಿದೆ. ಬಿ. ವೈ. ರಾಘವೇಂದ್ರ ಒಬ್ಬರನ್ನು ಬಿಟ್ಟರೆ ಬೇರೆ ಯಾವುದೇ ಸಂಸದರು ವಿಜಯೇಂದ್ರ ಮುಂದುವರಿಕೆಯನ್ನು ಒಪ್ಪುವುದಿಲ್ಲ” ಎಂದು ವ್ಯಂಗ್ಯವಾಡಿದರು.
ಪಕ್ಷದ ಪರಿಸ್ಥಿತಿಯನ್ನು ವಿವರಿಸುತ್ತಾ, “ಐಸಿಯುನಲ್ಲಿರುವ ರೋಗಿಯೂ ಬದುಕುವ ಸಾಧ್ಯತೆ ಇದೆ ಎಂದು ವೈದ್ಯರು ಸಮಾಧಾನಪಡಿಸುವ ಸ್ಥಿತಿಯಂತಿದೆ ಬಿಜೆಪಿಯ ಪರಿಸ್ಥಿತಿ” ಎಂದು ಯತ್ನಾಳ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.