ಬೆಂಗಳೂರು: ಉದ್ದೇಶಿತ 56,432 ಸರ್ಕಾರಿ ನೌಕರರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಗಳ (SC) ನಡುವೆ ಒಳಮೀಸಲಾತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಫಲವಾದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಆಡಳಿತಾರೂಢ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಬಿಜೆಪಿ ಬಯಸುತ್ತದೆ ಎಂದು ವಿಜಯೇಂದ್ರ ಹೇಳಿದರು. 50,000 ಅಥವಾ 1,00,000 ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದು ಸರ್ಕಾರದ ವಿವೇಚನೆಗೆ ಬಿಟ್ಟದ್ದು ಎಂದು ಬೆಟ್ಟು ಮಾಡಿದ ಅವರು, “ಆದರೆ ಬಿಜೆಪಿ ಸರ್ಕಾರವು ಮೀಸಲಾತಿಯನ್ನು ಶೇ. 56 ಕ್ಕೆ ಹೆಚ್ಚಿಸಿ ಒಳಮೀಸಲಾತಿಯನ್ನು ಖಚಿತಪಡಿಸಿತ್ತು. ತುಳಿತಕ್ಕೊಳಗಾದ ಸಮುದಾಯಗಳಿಗೆ ಒಳಮೀಸಲಾತಿಯ ಮೂಲಕ ಅವಕಾಶಗಳನ್ನು ನೀಡಬೇಕು,” ಎಂದು ತಿಳಿಸಿದರು.
ಒಳಮೀಸಲಾತಿ ಇಲ್ಲದೆಯೇ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸುವ ರಾಜ್ಯ ಸರ್ಕಾರದ ನಿರ್ಧಾರವು ಮಾದಿಗ ಸಮುದಾಯದ ಸದಸ್ಯರಿಂದ ಪ್ರತಿಭಟನೆಗೆ ಕಾರಣವಾಗಿದೆ, ಅವರು ದಶಕಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಮೀಸಲಾತಿ ಮಿತಿಯನ್ನು ಶೇ. 50 ರಿಂದ ಶೇ. 56 ಕ್ಕೆ ಏರಿಸಿತ್ತು, ಇದರಲ್ಲಿ ಎಸ್‌ಸಿ ಮೀಸಲಾತಿಯನ್ನು ಶೇ. 15 ರಿಂದ ಶೇ. 17 ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿಯನ್ನು ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿತ್ತು.
ಮೀಸಲಾತಿ ಮಿತಿಯನ್ನು ಶೇ. 56 ಕ್ಕೆ ಏರಿಸುವ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ, ಏಕೆಂದರೆ ಇದು ಇಂದ್ರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಶೇ. 50 ರ ನಿಯಮದ ಉಲ್ಲಂಘನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಳಿತಕ್ಕೊಳಗಾದ ಸಮುದಾಯಗಳಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ, “ಅವರಿಗೆ ಎಸ್‌ಸಿ ಮತ್ತು ಎಸ್‌ಟಿಗಳ ಬಗ್ಗೆ ಕಾಳಜಿ ಇದ್ದರೆ, ಪ್ರಕರಣ ನ್ಯಾಯಾಲಯದಲ್ಲಿದೆ ಎಂಬ ಕುಂಟು ನೆಪ ಹೇಳಬಾರದು; ಉದ್ಯೋಗ ನೀಡುವ ಮೂಲಕ ನ್ಯಾಯ ಒದಗಿಸಬೇಕು. ಮಗುವನ್ನು ಚಿವುಟಿ ತೊಟ್ಟಿಲು ತೂಗುವ ಸರ್ಕಾರದ ಈ ಧೋರಣೆ ಅಪರಾಧ,” ಎಂದರು.
