Home ವಿದೇಶ ಇರಾನ್‌ನಲ್ಲಿರುವ ತನ್ನ ನಾಗರಿಕರಿಗೆ ಎಚ್ಚರಿಕೆಯಿಂದಿರಲು ಭಾರತ ಮನವಿ

ಇರಾನ್‌ನಲ್ಲಿರುವ ತನ್ನ ನಾಗರಿಕರಿಗೆ ಎಚ್ಚರಿಕೆಯಿಂದಿರಲು ಭಾರತ ಮನವಿ

0

ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಇರಾನ್‌ಗೆ ಹೋಗುವ ಎಲ್ಲಾ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸುವಂತೆ ಭಾರತವು ತನ್ನ ನಾಗರಿಕರಿಗೆ ಬುಧವಾರ ಸಲಹೆ ನೀಡಿದೆ.

ಸಲಹೆಯೊಂದರಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಪ್ರಸ್ತುತ ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಮನವಿ ಮಾಡಿದೆ. 

ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಮತ್ತು ಸಂಘಟನೆಯ ಇತರ ಕಮಾಂಡರ್‌ಗಳನ್ನು ಇಸ್ರೇಲ್ ಕೊಂದಿದ್ದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಇಸ್ರೇಲ್‌ ಮೇಲೆ ಸುಮಾರು 200 ಕ್ಷಿಪಣಿಗಳನ್ನು ಉಡಾಯಿಸಿದ ಒಂದು ದಿನದ ನಂತರ ಈ ಮನವಿ ಮಾಡಿಕೊಳ್ಳಲಾಗಿದೆ. 

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕ್ಷಿಪಣಿ ದಾಳಿಗಳಿಗೆ ಪ್ರತಿಯಾಗಿ ಇರಾನ್ ಇಸ್ರೇಲಿನ ಪ್ರತಿಕಾರವನ್ನು “ಅನುಭವಿಸಲಿದೆ” ಎಂದು ಹೇಳಿದರು.

“ನಾವು ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಯಲ್ಲಿ ಆಗುತ್ತಿರುವ ಇತ್ತೀಚಿನ ಉಲ್ಬಣವನ್ನು ನಿಕಟವಾಗಿ ಗಮನಿಸುತ್ತಿದ್ದೇವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

“ಇರಾನ್‌ಗೆ ಎಲ್ಲಾ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಲು ಭಾರತೀಯ ಪ್ರಜೆಗಳಿಗೆ ಸಲಹೆ ನೀಡಲಾಗಿದೆ. ಪ್ರಸ್ತುತ ಇರಾನ್‌ನಲ್ಲಿ ನೆಲೆಸಿರುವವರು ಜಾಗರೂಕರಾಗಿರಲು ಮತ್ತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ವಿನಂತಿಸಲಾಗಿದೆ” ಎಂದು ಅದು ಹೇಳಿದೆ.

ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಂಗಳವಾರ ಇಸ್ರೇಲ್‌ನಲ್ಲಿ ವಾಸಿಸುವ ಭಾರತೀಯ ಪ್ರಜೆಗಳಿಗೆ ಸಲಹೆಯನ್ನು ನೀಡಿದೆ.

“ಈ ಪ್ರದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಸೂಚಿಸಿದಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಸೂಚಿಸಲಾಗಿದೆ” ಎಂದು ಅದು ಹೇಳಿದೆ.

“ದಯವಿಟ್ಟು ಜಾಗರೂಕರಾಗಿರಿ, ದೇಶದೊಳಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಗಳ ಹತ್ತಿರ ಇರಿ” ಎಂದು ಅದು ಹೇಳಿದೆ.

ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಎಲ್ಲಾ ಭಾರತೀಯ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಸ್ರೇಲಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದರು.

You cannot copy content of this page

Exit mobile version