ಹವಾಮಾನ ವರದಿ: ಇನ್ನೂ ಐದು ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ
ಲಿಂಕ್ ನಕಲಿಸಲಾಗಿದೆ ✓

ಕರ್ನಾಟಕ ಕರಾವಳಿ ಭಾಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಮಳೆ ಮುನ್ಸೂಚನೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳ ಸಮುದ್ರ ಹತ್ತಿರ ಇರುವ ಪ್ರದೇಶ ಹಾಗೂ ಬಯಲು ಇರುವ ಪ್ರದೇಶಗಳಲ್ಲಿ ಭಾರಿ ಮಳೆಯೊಂದಿಗೆ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇತ್ತ ಮಲೆನಾಡು ಭಾಗದ ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗವು ನಿರಂತರವಾಗಿ 40ರಿಂದ 50 kmph ವೇಗ ತಲುಪುವ ಸಾಧ್ಯತೆಯಿದೆ. ಹೀಗಾಗಿ “ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ (ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು) ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ (ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ,ಮಂಡ್ಯ, ಮಡಿಕೇರಿ, ಮೈಸೂರು) ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಇದೇ ವೇಳೆ ಗಾಳಿಯು 40ರಿಂದ 50 kmph ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
Peepal Media Desk
Peepal Media · ದೇಶ ವಿಭಾಗ
