ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ ಮಣಿಪುರ ಸರ್ಕಾರ ಐದು ದಿನಗಳ ಕಾಲ ರಾಜ್ಯದಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಗೃಹ ಇಲಾಖೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಸೆಪ್ಟೆಂಬರ್ 15ರವರೆಗೆ ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಜಾರಿಯಲ್ಲಿರುತ್ತದೆ.
ಸೋಮವಾರ ಇಂಫಾಲ್‌ನ ಖ್ವೈರಂಬಂಡ್ ಮಹಿಳಾ ಮಾರುಕಟ್ಟೆಯಲ್ಲಿ ವಿವಿಧ ಶಾಲಾ-ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಜಮಾಯಿಸಿದರು. ಇತ್ತೀಚಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ಹಿಂದಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಂಗಳವಾರ ಬಿಟಿ ರಸ್ತೆಯ ಮೂಲಕ ರಾಜಭವನದತ್ತ ಮೆರವಣಿಗೆ ನಡೆಸಲು ಯತ್ನಿಸಿದ ಅವರನ್ನು ಭದ್ರತಾ ಪಡೆಗಳು ಕಾಂಗ್ರೆಸ್ ಭವನದ ಬಳಿ ತಡೆದರು.
ಮಣಿಪುರ ಸರ್ಕಾರದ ಡಿಜಿಪಿ ಮತ್ತು ಭದ್ರತಾ ಸಲಹೆಗಾರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರಾಜಭವನದತ್ತ ಪ್ರತಿಭಟನಾಕಾರರು ಮೆರವಣಿಗೆ ನಡೆಸಲು ಯತ್ನಿಸಿದ ಸಂದರ್ಭದಲ್ಲಿ ವಿದ್ಯಾರ್ಥಿ ಮತ್ತು ಮಹಿಳಾ ಪ್ರತಿಭಟನಾಕಾರರು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದರಿಂದ ಅಶ್ರುವಾಯು ಸಿಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನಾ ರ್ಯಾಲಿ ನಡೆಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಮಣಿಪುರ ಸರ್ಕಾರವು ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕರ್ಫ್ಯೂ ಮತ್ತು ಥೌಬಲ್‌ನಲ್ಲಿ BNS ಸೆಕ್ಷನ್ 163 (2)ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ.