Home ಜನ-ಗಣ-ಮನ ಧರ್ಮ- ಸಂಸ್ಕೃತಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಅವಿರೋಧ ಆಯ್ಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಅವಿರೋಧ ಆಯ್ಕೆ

0

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಮಹಾಸಭಾದ ಕಾರ್ಯಕಾರಿಣಿ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಮಾಜಿ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಈಶ್ವರ ಬಿ. ಖಂಡ್ರೆ ಅವರನ್ನು ಆಯ್ಕೆ ಮಾಡುವ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಸದಸ್ಯರು ಒಮ್ಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.

ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಈಶ್ವರ ಬಿ. ಖಂಡ್ರೆ ಅವರು, ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ಯಶಸ್ವಿಯಾಗಿ ನಿಭಾಯಿಸಿದ್ದರು. ತಮ್ಮ ಪೂಜ್ಯ ತಂದೆ ಭೀಮಣ್ಣ ಖಂಡ್ರೆಯವರ ಮಾರ್ಗದರ್ಶನದಲ್ಲಿ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಾ ಬಂದಿರುವ ಅವರು, ಇದೀಗ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಸಮಾಜದಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.

ತಮ್ಮ ಆಯ್ಕೆಗೆ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದ ಈಶ್ವರ ಬಿ. ಖಂಡ್ರೆ ಅವರು, ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಅಲ್ಲ ಎಂಬುದನ್ನು ಒತ್ತಿ ಹೇಳಿದರು. ಸಮಾಜದ ಎಲ್ಲ ಒಳಪಂಗಡಗಳನ್ನು ಒಗ್ಗೂಡಿಸುವುದು ಅತ್ಯಂತ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ತಾವು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಹೇಳಿದರು.

ವೀರಶೈವ ಲಿಂಗಾಯತ ಸಮಾಜ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಈ ನಾಡಿನ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿವೆ ಎಂದು ಅವರು ಹೇಳಿದರು. ಸಮಾಜದಲ್ಲಿ ಶೇ.40ರಿಂದ 50ರಷ್ಟು ಬಡವರಿದ್ದು, ಶೇ.30ಕ್ಕಿಂತ ಹೆಚ್ಚು ಮಂದಿ ತೀವ್ರ ಹಿಂದುಳಿದ ಸ್ಥಿತಿಯಲ್ಲಿದ್ದಾರೆ. ಎಲ್ಲರಿಗೂ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶ ದೊರಕಿಸಿಕೊಡುವುದು ತಮ್ಮ ಅಧ್ಯಕ್ಷೀಯ ಅವಧಿಯ ಪ್ರಮುಖ ಗುರಿಯಾಗಿರಲಿದೆ ಎಂದು ಅವರು ತಿಳಿಸಿದರು.

You cannot copy content of this page

Exit mobile version