Home ರಾಜಕೀಯ ಕಸ್ತೂರಿ ರಂಗನ್ ವರದಿ: ಸಾರಾಸಗಟಾಗಿ ತಿರಸ್ಕರಿಸುವುದು ಸರಿಯಲ್ಲ : ಸಂಸದ ಯದುವೀರ್ ಒಡೆಯರ್

ಕಸ್ತೂರಿ ರಂಗನ್ ವರದಿ: ಸಾರಾಸಗಟಾಗಿ ತಿರಸ್ಕರಿಸುವುದು ಸರಿಯಲ್ಲ : ಸಂಸದ ಯದುವೀರ್ ಒಡೆಯರ್

0

ಮಡಿಕೇರಿ: ಕಸ್ತೂರಿ ರಂಗನ್ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸುವ ಮೂಲಕ ಜನರನ್ನು ದಿಕ್ಕುತಪ್ಪಿಸುವ ಕೆಲಸವನ್ನು ಸರ್ಕಾರ ಮಾಡಬಾರದು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿರುವ ಹಿನ್ನೆಲೆಯಲ್ಲಿ, ಸಂಸದ ಯದುವೀರ್ ಒಡೆಯರ್ ನೇತೃತ್ವದಲ್ಲಿ ಮಡಿಕೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಸಮಾಲೋಚನಾ ಸಭೆ ನಡೆಯಿತು. ರೈತ ಸಂಘ, ಕೊಡಗು ಬೆಳೆಗಾರರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರಿಂದ ವರದಿ ಜಾರಿ ಕುರಿತು ಅಹವಾಲು ಹಾಗೂ ಸಲಹೆಗಳನ್ನು ಆಲಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಸಂಘಟನೆಗಳ ಮುಖಂಡರು, ಕಸ್ತೂರಿ ರಂಗನ್ ವರದಿ ಜಾರಿಗೆ ತಮ್ಮ ವಿರೋಧವಿಲ್ಲ. ಆದರೆ ವರದಿ ಜಾರಿಯಿಂದ ಕೃಷಿ ಜಮೀನು, ಕೃಷಿ ಚಟುವಟಿಕೆ ಹಾಗೂ ಪಾರಂಪರಿಕ ಉದ್ಯೋಗಗಳಿಗೆ ಯಾವುದೇ ರೀತಿಯ ನಿರ್ಬಂಧಗಳು ಎದುರಾಗಬಾರದು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಒಟ್ಟು ಏಳು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಬಳಿಕ ಮಾತನಾಡಿದ ಯದುವೀರ್ ಒಡೆಯರ್, ಅರಣ್ಯದ ಗಡಿಭಾಗದಲ್ಲಿ ವಾಸಿಸುವ ಜನರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ ಎಂದರು.

‘ಕಸ್ತೂರಿ ರಂಗನ್ ವರದಿ ಇನ್ನೂ ಜಾರಿಯಾಗಿಲ್ಲ. ಆದರೆ ಅದನ್ನು ಜೀವಂತವಾಗಿಡುವ ಉದ್ದೇಶದಿಂದ ಕಾಲಕಾಲಕ್ಕೆ ಕರಡು ಅಧಿಸೂಚನೆಗಳು ಹೊರಬರುತ್ತಿವೆ. ರಾಜ್ಯ ಸರ್ಕಾರ ವರದಿಯನ್ನು ತಿರಸ್ಕರಿಸುತ್ತೇವೆ ಎಂದು ಹೇಳುವುದರಿಂದ ಮಾತ್ರ ಸಮಸ್ಯೆ ಬಗೆಹರಿಯುವುದಿಲ್ಲ. ವೈಜ್ಞಾನಿಕವಾಗಿ ಚರ್ಚಿಸಿ, ಸ್ಥಳೀಯ ವಾಸ್ತವಾಂಶಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಸಲಹೆ ನೀಡಿದರು.

ಕೇರಳದಲ್ಲಿ ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯನ್ನು ಕಡಿಮೆಗೊಳಿಸುವ ಹಾಗೂ ಬಫರ್‌ ಝೋನ್‌ ಅನ್ನು ಶೂನ್ಯಕ್ಕೆ ಇಳಿಸುವ ಕುರಿತು ಕೇಂದ್ರಕ್ಕೆ ಸ್ಪಷ್ಟ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೇ ರೀತಿಯಲ್ಲಿ ಕರ್ನಾಟಕವೂ ತನ್ನ ವಾಸ್ತವಾಂಶಗಳನ್ನು ಮುಂದಿಟ್ಟುಕೊಂಡು ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು ಎಂದರು.

‘ಇದು ಏಳನೇ ಕರಡು ಅಧಿಸೂಚನೆ. ಇದೇ ರೀತಿಯಲ್ಲಿ ಮುಂದುವರಿದರೆ ಮುಂದಿನ ದಿನಗಳಲ್ಲಿ 9ನೇ, 10ನೇ ಅಧಿಸೂಚನೆಗಳೂ ಬರಬಹುದು. ಹೀಗಾಗಿ ಈಗಲೇ ವೈಜ್ಞಾನಿಕ ಮತ್ತು ವಾಸ್ತವಿಕ ಮಾಹಿತಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಬೇಕಿದೆ’ ಎಂದು ಯದುವೀರ್ ಹೇಳಿದರು.

ಮಾನವ–ವನ್ಯಜೀವಿ ಸಂಘರ್ಷದ ಕುರಿತು ಮಾತನಾಡಿದ ಅವರು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ ಎಂದರು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಅವರು, ಪ್ರತಿಯೊಂದು ವಿಚಾರಕ್ಕೂ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವ ರಾಜಕೀಯವನ್ನು ನಿಲ್ಲಿಸಬೇಕು ಎಂದು ಹೇಳಿದರು.

‘ಅರಣ್ಯ ಇಲಾಖೆ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿದೆ. ಆನೆ–ಮಾನವ ಸಂಘರ್ಷದಂತಹ ಗಂಭೀರ ಸಮಸ್ಯೆಗಳು ಎದುರಾಗಿರುವ ಸಂದರ್ಭದಲ್ಲಿ, ₹2,000 ಕೋಟಿ ಹಣ ಲಭ್ಯವಿದ್ದರೂ ಅದನ್ನು ರಾಜ್ಯ ಸರ್ಕಾರ ಸೂಕ್ತವಾಗಿ ಬಳಸಿಕೊಳ್ಳುತ್ತಿಲ್ಲ. ಎಲ್ಲ ವಿಚಾರಗಳಲ್ಲೂ ರಾಜಕೀಯ ಮಾಡಿ ಕೇಂದ್ರ ಸರ್ಕಾರದ ಮೇಲೆ ತಪ್ಪು ಹೊರಿಸುವುದನ್ನು ಬಿಡಬೇಕು’ ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ರೈತರು ಹಾಗೂ ಬೆಳೆಗಾರರು ಭಾಗವಹಿಸಿ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಮಂಡಿಸಿದರು.

You cannot copy content of this page

Exit mobile version