ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಪತ್ರಕರ್ತರ ಸಂವಾದದಲ್ಲಿ ಮಾತನಾಡಿದ ಅವರು, “ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಳಗೊಂಡ ಎನ್‌ಡಿಎ (NDA) ಮೈತ್ರಿಕೂಟವು 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ. ಉಭಯ ಪಕ್ಷಗಳು ಆ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿವೆ” ಎಂದರು.
ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಗೆ ತಿರುಗೇಟು ನೀಡಿದ ನಿಖಿಲ್, “ನಮ್ಮ ಪಕ್ಷದ ಕಥೆ ಪಕ್ಕಕ್ಕಿರಲಿ. ಬಿಹಾರದಲ್ಲಿ ಕಾಂಗ್ರೆಸ್ ಎಲ್ಲಿದೆ? ಅದು ಎಷ್ಟು ಅಂಕಿಗಳಿಗೆ ಕುಸಿದಿದೆ? ಬರಿ ಬಿಹಾರ ಮಾತ್ರವಲ್ಲ, ಇತರ ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ಥಾನಗಳನ್ನು ಕಳೆದುಕೊಂಡಿದೆ” ಎಂದು ವಾಗ್ದಾಳಿ ನಡೆಸಿದರು.
