Home ದೇಶ 2028ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ ಭವಿಷ್ಯ

2028ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ ಭವಿಷ್ಯ

0

ಹಾಸನ: 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ಶತಸ್ಸಿದ್ಧ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ನಂತರ ಈಗಿನ ಮುಖ್ಯಮಂತ್ರಿ ಆ ಸ್ಥಾನದಲ್ಲಿ ಇರುವುದಿಲ್ಲ ಹಾಗೂ ಆ ಸಂದರ್ಭದಲ್ಲಿ ಕುಮಾರಸ್ವಾಮಿಯ ಮತ್ತೊಂದು ಮುಖವನ್ನು ಎಲ್ಲರೂ ನೋಡಲಿದ್ದಾರೆ ಎಂದು ಗುಡುಗಿದ್ದಾರೆ.

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡ ನಕಲಿ ಸ್ಟಿಂಗ್ ಕಾರ್ಯಾಚರಣೆಗಳ ಕುರಿತು ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ ಕುಮಾರಸ್ವಾಮಿ, ಇಂತಹ ಸ್ಟಿಂಗ್ ನಡೆಸಿದ ವ್ಯಕ್ತಿಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದರು. ಸಿದ್ದರಾಮಯ್ಯ ಇಲ್ಲದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ಸರ್ವನಾಶವಾಗಲಿದೆ ಎಂದು ಹೇಳಿದ ಅವರು, ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಕೆಳಗಿಳಿಸಲು ಸ್ಟಿಂಗ್ ಆಪರೇಷನ್ ಮಾಡುವವರ ಜತೆ ಕೈಜೋಡಿಸಿ ಆಡಳಿತ ಪಕ್ಷದ ನಾಯಕರೇ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದರು. ಇಂತಹ ಗಂಭೀರ ಆರೋಪಗಳು ಕೇಳಿಬಂದಿದ್ದರೂ ಸಿದ್ದರಾಮಯ್ಯ ಅವರು ಈವರೆಗೆ ಮೌನ ವಹಿಸಿರುವುದು ಅಚ್ಚರಿ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಟಿಂಗ್ ಕಾರ್ಯಾಚರಣೆ ನಡೆಸಿದ ವ್ಯಕ್ತಿಯ ವಿರುದ್ಧ ದೂರು ನೀಡಲು ಪೊಲೀಸ್ ಮಹಾನಿರ್ದೇಶಕರನ್ನು (DGP) ಭೇಟಿ ಮಾಡಿದಾಗ ನಿರಾಶಾದಾಯಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಆರೋಪಿಸಿದ ಅವರು, ಸುಮಾರು 100 ರಿಂದ 150 ಪೊಲೀಸ್ ಅಧಿಕಾರಿಗಳ ಗೌಪ್ಯ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ ಎಂದರು. ಇದು ರಾಜ್ಯದ ಗೃಹ ಇಲಾಖೆಯ ಕಾರ್ಯವೈಖರಿ ಮತ್ತು ಕಾನೂನು ಸುವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಕಿಡಿಕಾರಿದರು.

ಕೆಪಿಎಸ್‌ಸಿ ಹಗರಣ ಸೇರಿದಂತೆ ನೈಸ್ ಹಗರಣವನ್ನು ಮುಚ್ಚಿಹಾಕಲು ಮತ್ತು ರಾಜ್ಯದ ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ತಪ್ಪಿತಸ್ಥರನ್ನು ರಕ್ಷಿಸುತ್ತಿರುವ ಸರ್ಕಾರದ ವಿರುದ್ಧ ಜೆಡಿಎಸ್ ನಿರಂತರ ಹೋರಾಟ ಮುಂದುವರಿಸಲಿದೆ ಎಂದು ಎಚ್ಚರಿಸಿದರು.

You cannot copy content of this page

Exit mobile version