Home ಬೆಂಗಳೂರು ಬರಪೀಡಿತ ಪಟ್ಟಿಯಿಂದ ಗುರುಮಠಕಲ್, ಯಾದಗಿರಿ ಕೈಬಿಟ್ಟ ಸರ್ಕಾರ: ವಿಧಾನಸೌಧದಲ್ಲಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಏಕಾಂಗಿ...

ಬರಪೀಡಿತ ಪಟ್ಟಿಯಿಂದ ಗುರುಮಠಕಲ್, ಯಾದಗಿರಿ ಕೈಬಿಟ್ಟ ಸರ್ಕಾರ: ವಿಧಾನಸೌಧದಲ್ಲಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಏಕಾಂಗಿ ಧರಣಿ

0

ಬೆಂಗಳೂರು: ರಾಜ್ಯ ಸರ್ಕಾರದ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಗುರುಮಠಕಲ್ ಮತ್ತು ಯಾದಗಿರಿ ತಾಲೂಕುಗಳನ್ನು ಕೈಬಿಟ್ಟಿರುವುದನ್ನು ವಿರೋಧಿಸಿ, ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ಸೋಮವಾರ ಬೆಂಗಳೂರಿನ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಏಕಾಂಗಿ ಧರಣಿ ಸತ್ಯಾಗ್ರಹ ನಡೆಸಿದರು.

ಸರ್ಕಾರ ಬಿಡುಗಡೆ ಮಾಡಿರುವ ಮೊದಲ ಹಾಗೂ ಎರಡನೇ ಬರಪೀಡಿತ ಪಟ್ಟಿಯಲ್ಲಿ ಈ ಎರಡೂ ತಾಲೂಕುಗಳನ್ನು ಸೇರಿಸದೆ ಕಲ್ಯಾಣ ಕರ್ನಾಟಕ ಭಾಗದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಶರಣಗೌಡ ಕಂದಕೂರ್ ತೀವ್ರ ಆಕ್ರೋಶ ಹೊರಹಾಕಿದರು. ಮಳೆಯಿಲ್ಲದೆ ಕಂಗಾಲಾಗಿರುವ ಈ ಭಾಗದ ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣವೇ ಸ್ಪಂದಿಸಬೇಕು ಮತ್ತು ಎರಡೂ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಿ ಪರಿಹಾರ ಕಾರ್ಯಗಳನ್ನು ಆರಂಭಿಸಬೇಕು ಎಂದು ಅವರು ಆಗ್ರಹಿಸಿದರು.

ಶಾಸಕರ ಈ ಹೋರಾಟಕ್ಕೆ ಜೆಡಿಎಸ್ ವರಿಷ್ಠರು ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಈ ಕುರಿತು ‘ಎಕ್ಸ್’ ಖಾತೆಯಲ್ಲಿ ಹೇಳಿಕೆ ನೀಡಿರುವ ಜೆಡಿಎಸ್, “ರೈತರನ್ನು ರಕ್ಷಿಸಿ, ಅನ್ನದಾತರನ್ನು ಉಳಿಸಿ! ಗುರುಮಠಕಲ್ ಮತ್ತು ಯಾದಗಿರಿ ತಾಲೂಕುಗಳನ್ನು ತಕ್ಷಣವೇ ಬರಪೀಡಿತ ಎಂದು ಘೋಷಿಸಬೇಕೆಂದು ಆಗ್ರಹಿಸಿ ಶಾಸಕ ಶರಣಗೌಡ ಕಂದಕೂರ್ ನಡೆಸುತ್ತಿರುವ ಈ ಹೋರಾಟಕ್ಕೆ ಜೆಡಿಎಸ್ ಸಂಪೂರ್ಣ ಬೆಂಬಲ ನೀಡುತ್ತದೆ. ನಮ್ಮ ಧ್ವನಿ ಯಾವಾಗಲೂ ರೈತರ ಪರವಾಗಿಯೇ ಇರುತ್ತದೆ. ರಾಜ್ಯ ಸರ್ಕಾರ ಇನ್ನಾದರೂ ಕಣ್ಣು ತೆರೆಯಲಿ” ಎಂದು ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದರೂ ವಾಸ್ತವಿಕ ಪರಿಸ್ಥಿತಿಯನ್ನು ಪರಿಗಣಿಸದೆ ಹಲವು ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವುದರ ವಿರುದ್ಧ ರೈತ ಸಂಘಟನೆಗಳು ಮತ್ತು ಪ್ರತಿಪಕ್ಷಗಳ ಆಕ್ರೋಶ ಹೆಚ್ಚುತ್ತಿರುವ ಬೆನ್ನಲ್ಲೇ ಈ ಪ್ರತಿಭಟನೆ ನಡೆದಿದ್ದು, ಸರ್ಕಾರಕ್ಕೆ ತೀವ್ರ ಮುಜುಗರ ತಂದೊಡ್ಡಿದೆ.

You cannot copy content of this page

Exit mobile version