ನನ್ನ ಕಣ್ಮುಂದೆಯೇ ಜೆಡಿಎಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ. ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆತ್ಮವಿಶ್ವಾಸದಿಂದ ಹೇಳಿದ್ದಾರೆ.
ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಪಕ್ಷದ ‘ಜನತಾ ಮಿತ್ರ’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಕೊನೆಯವರೆಗೂ ರಾಜ್ಯದ ನೆಲ, ಜಲಕ್ಕಾಗಿ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮುಂದುವರೆದು, ಕುಮಾರಸ್ವಾಮಿ ಅವರು ಪಕ್ಷವನ್ನು ಉಳಿಸಲು 10 ವರ್ಷಗಳಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಅದರ ಶ್ರಮ ಏನೆಂಬುದು ನನಗೆ ಗೊತ್ತು. ನನ್ನ ಆರೋಗ್ಯ ಇನ್ನು ಸ್ವಲ್ಪ ಚೇತರಿಸಿಕೊಳ್ಳಬೇಕು. ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಳ್ಳುತ್ತೇನೆ. ಪಕ್ಷವನ್ನು ಉಳಿಸಿ, ಬೆಳೆಸುವಲ್ಲಿ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಹುರಿದುಂಬಿಸಿದರು.