Tuesday, September 23, 2025

ಸತ್ಯ | ನ್ಯಾಯ |ಧರ್ಮ

ಮೆದುಳು ಜ್ವರ ತಡೆಗೆ ಜೆ.ಇ ಲಸಿಕೆ ಅಗತ್ಯ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ, ಡಿಸೆಂಬರ್ 5 (ಕವಾ): ಜಿಲ್ಲೆಯಲ್ಲಿನ 1ರಿಂದ 15 ವರ್ಷದೊಳಗಿನ ಮಕ್ಕಳಲ್ಲಿ ಮೆದುಳು ಜ್ವರ ಬಾರದಂತೆ ತಡೆಯಲು ಜೆ.ಇ. ಲಸಿಕೆ ಪಡೆಯುವುದು ಅಗತ್ಯವಿದ್ದು, ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ಪಡೆಯಲು ಪ್ರೇರೇಪಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ, ನಗರದ ಬೋರ್ಡ್ ಹೈಸ್ಕೂಲ್ನಲ್ಲಿ ನಡೆದ, ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರೋಗಗಳು ಬಂದಾಗ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ಅಗತ್ಯ ಲಸಿಕೆಗಳನ್ನು ಪಡೆಯುವ ಮೂಲಕ ಮುನ್ನೆಚ್ಚರಿಕೆ ವಹಿಸಬೇಕು. ಮೆದುಳು ಜ್ವರವು 1 ರಿಂದ 15 ವರ್ಷದೊಳಗಿನ ಮಕ್ಕಳನ್ನು ಭಾಧಿಸುವುದರಿಂದ ಮಕ್ಕಳಲ್ಲಿ, ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಹಾಗೂ ಮರಣ ಸಂಭವಿಸುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆಯಾಗಿ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಕೊಡಿಸಬೇಕು ಹಾಗೂ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಇಲ್ಲ ಎಂದರು.

ಜಿಲ್ಲೆಯಲ್ಲಿ ಈ ಲಸಿಕಾ ಅಭಿಯಾನದಲ್ಲಿ 2,18,324 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು,  ಒಟ್ಟು 1932 ಲಸಿಕಾ ಕೇಂದ್ರಗಳನ್ನು ಗುರುತಿಸಿದ್ದು, ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ,  ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಮುದಾಯ ಮಟ್ಟದಲ್ಲಿ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರೋಗ್ಯ ಇಲಾಖೆ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಶೇ.100 ಗುರಿ ಸಾಧಿಸುವಂತೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾಸ್ಪತ್ರೆಯ ವೈದ್ಯೆ ಡಾ.ವೀಣಾ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ.ಕೀರ್ತಿನಾಥ್ ಬಲ್ಲಾಳ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ವೀಣಾ ವಿವೇಕಾನಂದ, ಬೋರ್ಡ್ ಹೈಸ್ಕೂಲ್ನ ಮುಖ್ಯೋಪಾಧ್ಯಾಯನಿ ಶಾಂತಿ ಪೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್  ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿ, ವಂದಿಸಿದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಂಜಿ.ರಾಮ ನಿರೂಪಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page