Saturday, January 17, 2026

ಸತ್ಯ | ನ್ಯಾಯ |ಧರ್ಮ

ನ್ಯಾಯಮೂರ್ತಿ ಯಶವಂತ್ ವರ್ಮಾ ಅರ್ಜಿ ವಜಾ: ವಾಗ್ದಂಡನೆ ತನಿಖೆಗೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ ವರ್ಷ ದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಲೆಕ್ಕವಿಲ್ಲದ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ಆರಂಭಿಸುವ ಲೋಕಸಭಾ ಸ್ಪೀಕರ್‌ ನಿರ್ಧಾರವನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನು ಒಳಗೊಂಡ ನ್ಯಾಯಪೀಠ, ನ್ಯಾಯಾಧೀಶರ (ತನಿಖಾ) ಕಾಯ್ದೆ, 1968ರ ಅಡಿಯಲ್ಲಿ ಲೋಕಸಭಾ ಸ್ಪೀಕರ್ ರಚಿಸಿರುವ ಮೂವರು ಸದಸ್ಯರ ತನಿಖಾ ಸಮಿತಿಯು ಮುಂದುವರಿಯಬಹುದೆಂದು ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ನ್ಯಾಯಮೂರ್ತಿ ವರ್ಮಾ ಅವರು ತಮ್ಮ ಯಾವುದೇ ಮೂಲಭೂತ ಹಕ್ಕಿನ ಪ್ರಸ್ತುತ ಅಥವಾ ಅನಿವಾರ್ಯ ಉಲ್ಲಂಘನೆಯನ್ನು ಸ್ಥಾಪಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ವರ್ಮಾ ಅವರು ಮುಂದಿಟ್ಟ ಎಲ್ಲಾ ವಾದಗಳನ್ನು ತಿರಸ್ಕರಿಸಿದ ನ್ಯಾಯಾಲಯ, ರಾಜ್ಯಸಭೆಯು ಪದಚ್ಯುತಿ ನಿರ್ಣಯವನ್ನು ಒಪ್ಪಿಕೊಳ್ಳಲು ನಿರಾಕರಿಸಿದರೂ ಅಥವಾ ಅದರ ಅಧ್ಯಕ್ಷರ ಹುದ್ದೆಯಲ್ಲಿ ಖಾಲಿ ಸ್ಥಾನವಿದ್ದರೂ, 1968ರ ಕಾಯ್ದೆಯ ಅಡಿಯಲ್ಲಿ ತನಿಖಾ ಸಮಿತಿಯನ್ನು ರಚಿಸುವ ಲೋಕಸಭಾ ಸ್ಪೀಕರ್‌ ನಿರ್ಧಾರವನ್ನು ತಡೆಯಲು ಅಥವಾ ಅಮಾನ್ಯಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಮಾರ್ಚ್‌ 2025ರಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ವೇಳೆ ಸಂಭವಿಸಿದ ಬೆಂಕಿ ಅವಘಡದ ನಂತರ ದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಹಣ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ, ನ್ಯಾಯಮೂರ್ತಿ ವರ್ಮಾ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ಆರಂಭಿಸಲಾಗಿತ್ತು. ಈ ಪ್ರಕ್ರಿಯೆಯನ್ನು ಅವರು ತೀವ್ರವಾಗಿ ಟೀಕಿಸಿದ್ದರು.

ಇದಕ್ಕೂ ಮೊದಲು, ಸುಪ್ರೀಂ ಕೋರ್ಟ್‌ನ ಆಂತರಿಕ ತನಿಖಾ ಸಮಿತಿಯು ನ್ಯಾಯಮೂರ್ತಿ ವರ್ಮಾ ನೀಡಿದ ವಿವರಣೆಯನ್ನು ಅತೃಪ್ತಿಕರವೆಂದು ನಿರ್ಧರಿಸಿತ್ತು. ಇದರ ಹಿನ್ನೆಲೆ, ಅಂದಿನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಪ್ರಕರಣವನ್ನು ಮರುಪರಿಶೀಲನೆಗೆ ತೆಗೆದುಕೊಂಡಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page