ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಕಣದಲ್ಲಿ ತಾವಿಲ್ಲ ಎಂದು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಬಿಡುಗಡೆಯಾದ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ಪಟ್ಟಿಯಲ್ಲಿ ಅಣ್ಣಾಮಲೈ ಅವರ ಹೆಸರು ಕಾಣಿಸದಿರುವುದು ಹಲವರ ಗಮನ ಸೆಳೆದಿತ್ತು. ತಾವು ಈ ಬಾರಿ ಚುನಾವಣಾ ರೇಸ್‌ನಲ್ಲಿ ಇಲ್ಲ ಎಂದು ಅವರು ಬಹಿರಂಗವಾಗಿ ಘೋಷಿಸಿದ್ದಾರೆ.
ಈ ಕುರಿತು ವಿವರ ನೀಡಿದ ಅವರು, ತಾವು ಈ ಬಾರಿ ಸ್ಪರ್ಧಿಸುತ್ತಿಲ್ಲ ಎಂಬ ವಿಷಯವನ್ನು ತಮಿಳುನಾಡು ರಾಜ್ಯ ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಅವರಿಗೂ ಮೊದಲೇ ತಿಳಿಸಿರುವುದಾಗಿ ಹೇಳಿದ್ದಾರೆ. ಏಪ್ರಿಲ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ವೈಯಕ್ತಿಕವಾಗಿ ಸ್ಪರ್ಧಿಸುವುದಕ್ಕಿಂತ ಹೆಚ್ಚಾಗಿ, ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ತಾವು ಬಯಸಿದ್ದರೆ ತಮಿಳುನಾಡಿನ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು, ಆದರೆ ಪ್ರಸ್ತುತ ಸಂದರ್ಭದಲ್ಲಿ ರಾಜ್ಯದಾದ್ಯಂತ ಪಕ್ಷದ ಪರವಾಗಿ ಪ್ರಚಾರ ಮಾಡುವುದು ತಮ್ಮ ಪ್ರಮುಖ ಪಾತ್ರವಾಗಿದೆ ಎಂದು ಅಣ್ಣಾಮಲೈ ಅಭಿಪ್ರಾಯಪಟ್ಟಿದ್ದಾರೆ. ಏಪ್ರಿಲ್ 7ರಂದು ಪುದುಚೇರಿ ಮತ್ತು ಕೇರಳದಲ್ಲಿ ಚುನಾವಣೆ ನಡೆಯಲಿರುವ ಕಾರಣ, ಅಲ್ಲಿಯವರೆಗೆ ಆ ರಾಜ್ಯಗಳಲ್ಲಿ ಪ್ರಚಾರ ನಡೆಸಿ, ಆನಂತರ ಪೂರ್ಣ ಪ್ರಮಾಣದಲ್ಲಿ ತಮಿಳುನಾಡಿನ ಚುನಾವಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದಾಗಿ ಅವರು ವಿವರಿಸಿದ್ದಾರೆ. ಪಕ್ಷ ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
