ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಶನಿವಾರ ನಸುಕಿನ ಜೇಳೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ತೆಲಂಗಾಣ ಮೂಲದ ಒಂದೇ ಕುಟುಂಬದ ಸದಸ್ಯರು ಎಂದು ಗುರುತಿಸಲಾಗಿದ್ದು, ಅವರು ಕಲಬುರಗಿಯ ಗಾಣಗಾಪುರದಲ್ಲಿರುವ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಕಲಬುರಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150ರ ಮರಗುತ್ತಿ ಕ್ರಾಸ್ ಬಳಿ ಈ ಅಪಘಾತ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ನೇರವಾಗಿ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ಐದೂ ಜನರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ಸಹಾಯದಿಂದ ಕಾರಿನ ಅವಶೇಷಗಳ ನಡುವೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಲಾರಿ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
