ಚೆನ್ನೈ: ತಮಿಳುನಾಡಿನ ಕಲ್ಲಿಕುರಿಚಿ ಕಳ್ಳ ಭಟ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.
ಜೂನ್ 18ರಂದು ಕರುಣಾಪುರಂ ಗ್ರಾಮದಲ್ಲಿ ನಡಿದಿದ್ದ ಕಲಬೆರಕೆ ಮದ್ಯಸೇವನೆಯ ಘಟನೆಯಲ್ಲಿ ಒಟ್ಟು 118 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕು ಆಯೋಗವು, ತಮಿಳುನಾಡು ಮುಖ್ಯ ಕಾರ್ಯದರ್ಶಿ ಹಾಗೂ ತಮಿಳುನಾಡು ಪೊಲೀಸ್ ಮಹಾ ನರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿದ್ದು, ಘಟನೆಯ ಕುರಿತು ಒಂದು ವಾರದೊಳಗೆ ವಿಸ್ತೃತ ವರದಿ ಸಲ್ಲಿಸುವಂತೆ ಆದೇಶಿಸಿದೆ.
ರಾಷ್ಟ್ರೀಯ ಮಹಿಳಾ ಆಯೋಗ ಕೂಡಾ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ದುರಂತದಲ್ಲಿ ಆರು ಮಂದಿ ಮಹಿಳೆಯರು ಮೃತಪಟ್ಟಿರುವ ಕುರಿತು ತನಿಖೆ ನಡೆಸಲು ಮೂರು ಸದಸ್ಯರ ಸಮಿತಿಯನ್ನು ರಚಿಸಿದೆ. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿರುವ ಖುಷ್ಬೂ ಸುಂದರ್ ಇಂದು ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಲಿದ್ದು, ನಂತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನೂ ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿರುವುದಾಗಿ ತಿಳಿದು ಬಂದಿದೆ.
ಈ ಕಲ್ಲಿಕುರಿಚಿ ಕಳ್ಳ ಭಟ್ಟಿ ದುರಂತವು ಆಡಳಿತಾರೂಢ ಡಿಎಂಕೆ ಹಾಗೂ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.