ಬೆಂಗಳೂರು, ಸೆಪ್ಟೆಂಬರ್.15: ರಾಜ್ಯ ಬರಗಾಲವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಪ್ರತಿಕೃತಿ ದಹಿಸಲಾಯಿತು. ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು, ಕಾರ್ಯಕರ್ತರನ್ನು ಬಂಧಸಲಾಯಿತು.
ರಾಜ್ಯದಾದ್ಯಂತ ವಾಡಿಕೆಯ ಮಳೆಯಾಗದ ಕಾರಣ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ರಾಜ್ಯದ 192 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಬಗ್ಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.
ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರವರು “ಕಾವೇರಿ ಬೇಸಿನ್‌ನಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿರುವುದರಿಂದ ಕೃಷ್ಣರಾಜಸಾಗರ ಜಲಾಶಯದಲ್ಲಿ ಕೇವಲ 20 ಟಿಎಂಸಿ ನೀರು. ಅದರಲ್ಲಿ ಬಳಕೆಗೆ ಸಿಗುವುದು ಕೇವಲ 15 ಟಿಎಂಸಿ ನೀರು ಮಾತ್ರ. ಇಂಥ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸುಮಾರು 7 ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಘಾತಕಾರಿಯಾಗಿದೆ,” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬೆಂಗಳೂರಿಗೆ ಪ್ರತಿ ತಿಂಗಳು ಕುಡಿಯಲು ಒಂದೂವರೆ ಟಿಎಂಸಿ ನೀರು ಬೇಕು. ಕಾವೇರಿ ಕಣಿವೆಯ ರೈತರು ಹೊಲಗದ್ದೆಗಳಿಗೆ ನೀರಿಲ್ಲದೆ ಪರದಾಡುತ್ತಿದ್ದಾರೆ. ಕೈಗಾರಿಕೆಗಳಿಗೆ ಕೊಡಬೇಕಾದ ನೀರು ಕೂಡಾ ಇಲ್ಲ. ಹೀಗಿರುವಾಗ ಏಳು ಟಿಎಂಸಿ ನೀರು ಎಲ್ಲಿಂದ ತರಲು ಸಾಧ್ಯ? ಮಂಡ್ಯ ಭಾಗದ ರೈತರು ನೀರಿಗೆ ಏನು ಮಾಡಬೇಕು? ಬೆಂಗಳೂರಿನ ಒಂದೂವರೆ ಕೋಟಿ ಜನರು ಕುಡಿಯುವ ನೀರು ಇಲ್ಲದೆ ಸಾಯಬೇಕೆ? ಎಂದು ಟಿ ಎ ನಾರಾಯಣಗೌಡ ಪ್ರಶ್ನಿಸಿದ್ದಾರೆ.
ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಯಾವುದೋ ಪ್ರಾಧಿಕಾರದ ಆದೇಶ ದೊಡ್ಡದಲ್ಲ. ಈ ಪ್ರಾಧಿಕಾರದ ಆದೇಶ ಪಾಲಿಸಿ ತಮಿಳುನಾಡು ಕೇಳಿದಷ್ಟು ನೀರನ್ನು ಇದುವರೆಗೆ ಬಿಟ್ಟಿದ್ದೇ ರಾಜ್ಯ ಸರ್ಕಾರ ಮಾಡಿದ ದೊಡ್ಡ ತಪ್ಪು. ರಾಜ್ಯ ಸರ್ಕಾರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತಾಡುವುದನ್ನು ಬಿಟ್ಟು ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂಬ ದೃಢ ಘೋಷಣೆಯನ್ನು ಮಾಡಬೇಕು. ರಾಜ್ಯದ ಎಲ್ಲ ಸಂಸದರೂ ದೆಹಲಿಯಲ್ಲಿ ಧರಣಿ ನಡೆಸಬೇಕು, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಅವರು ಆಗ್ರಹಿಸಿದ್ದಾರೆ.