ಸರ್ಕಾರಿ ಶಾಲಾ-ಕಾಲೇಜು ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವೃತ್ತಿಪರ ಕೋರ್ಸ್‌ಗಳಲ್ಲಿ ಶೇ. 7.5 ವಿಶೇಷ ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ!

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಗ್ರಾಮೀಣ ಭಾಗದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳಲ್ಲಿ ಶೇ. 7.5 ರಷ್ಟು ವಿಶೇಷ ಸಮತಲ (Horizontal) ಮೀಸಲಾತಿ ಕಲ್ಪಿಸುವ ಅಂತಿಮ ಅಧಿಸೂಚನೆಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಈ ಕುರಿತು “ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026” ಅನ್ನು ರೂಪಿಸಿ, ದಿನಾಂಕ 17.09.2026 ರಂದು ಕರಡು ಅಧಿಸೂಚನೆ ಹೊರಡಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು. ಸಲ್ಲಿಕೆಯಾದ ಎಲ್ಲಾ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಶೀಲಿಸಿದ ರಾಜ್ಯ ಸರ್ಕಾರ, ದಿನಾಂಕ 08.10.2026 ರಂದು ನಿಯಮ 9ಕ್ಕೆ ತಿದ್ದುಪಡಿ ತಂದು ಅಂತಿಮ ಅಧಿಸೂಚನೆ ಹೊರಡಿಸಿದ್ದು, ಇದು ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದೆ.

ಅಧಿಸೂಚನೆಯಲ್ಲಿ ಏನಿದೆ? (ನಿಯಮ 9ರ ತಿದ್ದುಪಡಿ ವಿವರ):

ಸರ್ಕಾರಿ ಸೀಟುಗಳಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಮೀಸಲಾದ ಒಟ್ಟು ಶೇಕಡಾ 15 ರಷ್ಟು (15%) ಸೀಟುಗಳನ್ನು ಈ ಕೆಳಗಿನಂತೆ ಎರಡು ಸಮಾನ ಭಾಗಗಳಾಗಿ (ಶೇ. 7.5 + ಶೇ. 7.5) ಸಮತಲವಾಗಿ ಹಂಚಿಕೆ ಮಾಡಲಾಗಿದೆ:

  1. ಶೇ. 7.5 ಮೀಸಲಾತಿ (ಸರ್ಕಾರಿ ಶಾಲೆ ಮತ್ತು ಸರ್ಕಾರಿ ಪಿಯು ಕಾಲೇಜು): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿರುವ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಮತ್ತು ಸರ್ಕಾರಿ ಪದವಿಪೂರ್ವ (ಪಿಯು) ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇಕಡಾ 7.5 ರಷ್ಟು ಸೀಟುಗಳು ಮೀಸಲಿರಲಿವೆ.
  2. ಶೇ. 7.5 ಮೀಸಲಾತಿ (ಇತರ ಗ್ರಾಮೀಣ ಶಾಲೆಗಳು): ಗ್ರಾಮೀಣ ಪ್ರದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು ಅಥವಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಇತರೆ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇಕಡಾ 7.5 ರಷ್ಟು ಸೀಟುಗಳು ಲಭ್ಯವಾಗಲಿವೆ.

ರಾಜ್ಯ ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಮುಂತಾದ ಉನ್ನತ ವೃತ್ತಿಪರ ಕೋರ್ಸ್‌ಗಳನ್ನು ಪಡೆಯಲು ಭಾರಿ ಪ್ರೋತ್ಸಾಹ ಮತ್ತು ಸಮಾನ ಅವಕಾಶ ದೊರೆತಂತಾಗಿದೆ.

Related Articles

ಇತ್ತೀಚಿನ ಸುದ್ದಿಗಳು