ಬೆಂಗಳೂರು: ಹಲವು ದೂರುಗಳ ನಂತರ, ದುಬಾರಿ ಶುಲ್ಕ ವಿಧಿಸುವುದನ್ನು ತಪ್ಪಿಸಲು ಕರ್ನಾಟಕ ಆರೋಗ್ಯ ಇಲಾಖೆಯು ಖಾಸಗಿ ಆಸ್ಪತ್ರೆಗಳ ಸೇವೆಗಳ ಬೆಲೆ ಪಟ್ಟಿಯನ್ನು ಗೋಚರಿಸುವ ಸ್ಥಳದಲ್ಲಿ ಪ್ರದರ್ಶಿಸುವಂತೆ ಆದೇಶ ಹೊರಡಿಸಲು ನಿರ್ಧರಿಸಿದೆ. ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪದೇ ಪದೇ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಸ್ಪತ್ರೆಗಳು ದರ ಪಟ್ಟಿಯನ್ನು ಪ್ರದರ್ಶಿಸಬೇಕು. ಇಲ್ಲವಾದಲ್ಲಿ ಆಸ್ಪತ್ರೆಗಳು ಅವುಗಳನ್ನು ಮುಚ್ಚುವುದು ಸೇರಿದಂತೆ ಇತರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.
ಕೆಮ್ಮು, ನೆಗಡಿ ಸೇರಿದಂತೆ ಸಣ್ಣಪುಟ್ಟ ಭೇಟಿಗೆ ಕೂಡ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿದ್ದಾರೆ ಎಂದು ಗುಂಡೂರಾವ್ ಅವರಿಗೆ ಹಲವರು ದೂರಿದ್ದರು.
ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ, KMPE ಕಾಯಿದೆಯು ಖಾಸಗಿ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳು ದರ ಪಟ್ಟಿಗಳನ್ನು ಗೋಚರಿಸುವ ಸ್ಥಳದಲ್ಲಿ ಪ್ರಮುಖವಾಗಿ ಪ್ರದರ್ಶಿಸುವುದು ಕಡ್ಡಾಯ. ಆದರೆ, ಶೇ 40ರಷ್ಟು ಆಸ್ಪತ್ರೆಗಳು ಇದನ್ನು ಅನುಸರಿಸುತ್ತಿಲ್ಲ.
ಇದೀಗ ಜಿಲ್ಲಾ ಆರೋಗ್ಯಾಧಿಕಾರಿಗಳು ಪದೇ ಪದೇ ಆಸ್ಪತ್ರೆಗಳಿಗೆ ಭೇಟಿ ನೀಡಿ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಖಾಸಗಿ ಆಸ್ಪತ್ರೆಗಳಿಗೆ ಬಿಸಿ ಮುಟ್ಟಿಸಲು ಸರ್ಕಾರ ನಿರ್ಧರಿಸಿದೆ. ಪದೇ ಪದೇ ನಿಯಮ ಉಲ್ಲಂಘಿಸುವ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಳೆದ ವರ್ಷ ಮಾರ್ಚ್‌ನಲ್ಲಿ ಆಗಿನ ಆರೋಗ್ಯ ಆಯುಕ್ತ ಡಿ ರಣದೀಪ್ ಅವರು ಇದೇ ರೀತಿಯ ಆದೇಶವನ್ನು ಹೊರಡಿಸಿದ್ದರು.
ರಾಜ್ಯದ ಆಸ್ಪತ್ರೆಗಳಿಗೆ ಭೇಟಿ ನೀಡಿ ಅನುಸರಣೆ ವರದಿಯನ್ನು ಶೀಘ್ರವೇ ಸಲ್ಲಿಸುವಂತೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಎಲ್ಲಾ ಖಾಸಗಿ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳು KPME ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಇದನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.
ಹೆಣ್ಣು ಭ್ರೂಣಹತ್ಯೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ, ಹಲವಾರು ಆಸ್ಪತ್ರೆಗಳು ಕೆಎಂಪಿಇ ಅಡಿಯಲ್ಲಿ ನೋಂದಣಿ ಮಾಡದಿರುವುದು ಸೇರಿದಂತೆ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಇಂತಹ ಆಸ್ಪತ್ರೆಗಳಿಗೆ ನಿಯಮಾವಳಿಗಳನ್ನು ಪಾಲಿಸುವಂತೆ ನೋಟಿಸ್ ನೀಡಲಾಗಿತ್ತು.