ಹೊಸದೆಹಲಿ: 17,901 ಕೋಟಿ ಬರ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ ಎಂದು ಕರ್ನಾಟಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬೈರೇಗೌಡ, ರಾಜ್ಯದಲ್ಲಿ ಜೂನ್‌ನಲ್ಲಿ ಶೇ.56, ಜುಲೈನಲ್ಲಿ ಶೇ.29, ಆಗಸ್ಟ್‌ನಲ್ಲಿ ಶೇ.73, ಸೆಪ್ಟೆಂಬರ್‌ನಲ್ಲಿ ಶೇ.23, ಅಕ್ಟೋಬರ್‌ನಲ್ಲಿ ಶೇ.63ರಷ್ಟು ಮಳೆ ಕೊರತೆ ಎದುರಾಗಿದೆ ಎಂದರು.
ಒಟ್ಟು 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಆರಂಭದಲ್ಲಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ನಂತರ ಇನ್ನೂ 21 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ, ಈ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಮನವಿ ಸಲ್ಲಿಸಲಾಗಿದೆ.
ರಾಜ್ಯದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಉಂಟಾಗುವ ಸಾಧ್ಯತೆ ಇದೆ ಎಂದೂ ಅವರು ಹೇಳಿದರು.
ಕೇಂದ್ರ ಸರ್ಕಾರದ ಅಧಿಕಾರಿಗಳು ಕರ್ನಾಟಕಕ್ಕೆ ಆಗಮಿಸಿದ್ದು, ಪರಿಸ್ಥಿತಿ ಅಧ್ಯಯನ ನಡೆಸುತ್ತಿದ್ದಾರೆ. ಅವರು ಇನ್ನೆರಡು ದಿನಗಳಲ್ಲಿ ವರದಿ ಸಲ್ಲಿಸಬಹುದು.
ಕೂಡಲೇ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಸಚಿವರು ಹೇಳಿದರು.
ಉದ್ಯೋಗ ಖಾತ್ರಿ ಯೋಜನೆಗೆ ರಾಜ್ಯಕ್ಕೆ ಇನ್ನೂ ಹಣ ಸಿಕ್ಕಿಲ್ಲ ಎಂದು ಆರ್‌ಡಿಪಿಆರ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. “ಈ ಯೋಜನೆಯಡಿ ಕೆಲಸ ಮಾಡಿದವರಿಗೆ ಹಣ ನೀಡಲು ಸಾಧ್ಯವಾಗುತ್ತಿಲ್ಲ. ಸುಮಾರು 600 ಕೋಟಿ ರೂ. ಬಾಕಿ ಇದ್ದು, ಈ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ” ಎಂದು ಹೇಳಿದರು.
”ರಾಜ್ಯದಲ್ಲಿ ಬರದ ಪರಿಸ್ಥಿತಿ ಇದೆ. ಬರ ಪರಿಸ್ಥಿತಿ ಘೋಷಣೆಯಾದ ನಂತರ ಕೆಲಸದ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಿಸಬೇಕು. ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರಿಗೆ 340.2 ಕೋಟಿ ಹಾಗೂ ನಗರ ಪ್ರದೇಶಕ್ಕೆ 213 ಕೋಟಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ” ಎಂದರು.