ಕ್ವಾರಿ ದುರಂತ: ನಿಯಮ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ, ನಾಲ್ವರ ಮೇಲೆ ಎಫ್‌ಐಆರ್ ದಾಖಲು – ಸಿಎಂ ಡಿ.ಕೆ. ಶಿವಕುಮಾರ್
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಾಪಟ್ಟಣದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತದ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಚೌಕಟ್ಟಿನಡಿ ಕಠಿಣ ಕ್ರಮ ಕೈಗೊಂಡು ಎಫ್‌ಐಆರ್ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಗುರುವಾರ ಕೆಂಗೇರಿಯ ರಾಜರಾಜೇಶ್ವರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಮೃತರ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಗಾಯಾಳುಗಳ ಆರೋಗ್ಯ ವಿಚಾರಿಸಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಎಲ್ಲಾ ವರದಿಗಳನ್ನು ತರಿಸಿಕೊಂಡು ಯಾವೆಲ್ಲಾ ನಿಯಮ ಉಲ್ಲಂಘನೆಯಾಗಿದೆ ಎಂಬುದನ್ನು ಪರಿಶೀಲಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದರು.
ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ಗಣಿಗಾರಿಕೆ ಕಾರ್ಯಸೂಚಿ ಕುರಿತು ಶೀಘ್ರದಲ್ಲೇ ಸಭೆ ನಡೆಸಲಾಗುವುದು. ಭವಿಷ್ಯದಲ್ಲಿ ರಾಜ್ಯದ ಎಲ್ಲಾ ಕ್ವಾರಿಗಳು ಕಟ್ಟುನಿಟ್ಟಿನ ನಿಯಮಗಳ ಅಡಿಯಲ್ಲಿ ಕಾರ್ಯನಿರ್ವಹಿಸುವಂತೆ ಹೊಸ ಮಾರ್ಗಸೂಚಿ ರೂಪಿಸಲಾಗುತ್ತದೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ” ಎಂದರು.
ಈ ನಡುವೆ, ಮಾದಾಪಟ್ಟಣ ಕ್ವಾರಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವರೆಕೆರೆ ಪೊಲೀಸರು ಇಬ್ಬರು ಮ್ಯಾನೇಜರ್‌ಗಳು, ಒಬ್ಬ ಚಾಲಕ ಹಾಗೂ ಒಬ್ಬ ಇಂಚಾರ್ಜ್ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಕ್ವಾರಿ ಮಾಲೀಕರು ಹಾಗೂ ಮ್ಯಾನೇಜರ್‌ಗಳ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಕ ಬಳಕೆಯಿಂದ ಈ ಅವಘಡ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದ ನಿಯಮಾನುಸಾರ ಪರಿಹಾರ ನೀಡಲಾಗುವುದು. ಕ್ವಾರಿ ಮಾಲೀಕರೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಈಗಾಗಲೇ ಚರ್ಚೆ ನಡೆಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
Peepal Media Desk
Peepal Media · ರಾಜ್ಯ ವಿಭಾಗ