ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಕೆಮ್ಯಾಕ್ ಸ್ಟ್ರೀಟ್‌ನಲ್ಲಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಯ ಮೇಲೆ ಗುರುವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿ, ಪೀಠೋಪಕರಣ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಕೃತ್ಯದ ಹಿಂದೆ ಬಿಜೆಪಿ ಕಾರ್ಯಕರ್ತರ ಕೈವಾಡವಿದೆ ಎಂದು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.
ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಹಾನಿಗೊಳಗಾದ ಕಚೇರಿಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಅವರು, “ಮುಂಜಾನೆ ೪:೩೦ರ ಸುಮಾರಿಗೆ ಆಯುಧಗಳೊಂದಿಗೆ ಕಚೇರಿಗೆ ನುಗ್ಗಿದ ಬಿಜೆಪಿ ಗೂಂಡಾಗಳು ಸಿಬ್ಬಂದಿಯ ಮೊಬೈಲ್ ಕಸಿದುಕೊಂಡು, ಕಂಪ್ಯೂಟರ್ ಹಾಗೂ ಟಿವಿಗಳನ್ನು ಒಡೆದುಹಾಕಿದ್ದಾರೆ. ಇದು ಪ್ರಜಾಪ್ರಭುತ್ವವಲ್ಲ, ರಾಜಕೀಯ ಗೂಂಡಾಗಿರಿ” ಎಂದು ಕಿಡಿಕಾರಿದ್ದಾರೆ.
ಘಟನೆ ನಡೆದ ಎರಡು ಗಂಟೆಗಳ ಕಾಲ ಪದೇಪದೇ ಕರೆ ಮಾಡಿದರೂ ಕೋಲ್ಕತ್ತಾ ಪೊಲೀಸರು ಸ್ಥಳಕ್ಕೆ ಬರದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ ಅವರು, ಪಶ್ಚಿಮ ಬಂಗಾಳದ ರಾಜ್ಯಪಾಲರು, ಕೇಂದ್ರ ಗೃಹ ಸಚಿವರು ಮತ್ತು ಪ್ರಧಾನಮಂತ್ರಿಗಳ ಕಾರ್ಯಾಲಯ (ಪಿಎಂಒ) ಈ ಬಗ್ಗೆ ಕ್ರಮ ಕೈಗೊಳ್ಳುತ್ತವೆಯೇ ಅಥವಾ ಕಣ್ಣುಮುಚ್ಚಿ ಕುಳಿತುಕೊಳ್ಳುತ್ತವೆಯೇ ಎಂದು ಪ್ರಶ್ನಿಸಿದ್ದಾರೆ.
ವಿರೋಧ ಪಕ್ಷಗಳನ್ನು ಹಿಂಸೆ, ದಾಂಧಲೆ ಮತ್ತು ಬೆದರಿಕೆಗಳ ಮೂಲಕ ದಮನ ಮಾಡಲಾಗುತ್ತಿದ್ದರೆ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಹೇಳಿದ ಬ್ಯಾನರ್ಜಿ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಅಲ್ಲದೆ, ರಾಜ್ಯದಲ್ಲಿ ಕಾನೂನಿನ ಆಡಳಿತವನ್ನು ಎತ್ತಿಹಿಡಿಯಲು ಕಲ್ಕತ್ತಾ ಹೈಕೋರ್ಟ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಮಧ್ಯಪ್ರವೇಶ ಮಾಡಬೇಕೆಂದು ಮನವಿ ಮಾಡಿದ್ದಾರೆ.
