ಬೆಂಗಳೂರು: 5 ಲಕ್ಷ ರೂಪಾಯಿ ಲಂಚ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಕೆಪಿ ಅಗ್ರಹಾರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜನನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರುನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಗೋವಿಂದರಾಜನ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ತಕ್ಷಣವೇ ಅಮಾನತು ಮಾಡುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಇದಲ್ಲದೆ, ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಈಗಾಗಲೇ ನೂರಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದರು. ಭ್ರಷ್ಟಾಚಾರದಲ್ಲಿ ತೊಡಗಿಸಿಕೊಳ್ಳದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯವಾಗಿದ್ದು, ಇಂತಹ ಘಟನೆಗಳು ಇಲಾಖೆಗೆ ಹಾಗೂ ಸರ್ಕಾರಕ್ಕೆ ಮುಜುಗರ ಉಂಟುಮಾಡುತ್ತವೆ ಎಂದು ಅವರು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಎಚ್ಚರಿಕೆ ನೀಡಿದರು.
