ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದಿನ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಮತ್ತು ಅಳಿಯ ಅನಿರುದ್ಧ್ ಭೇಟಿಯಾಗಿದ್ದರು.. ಆ ಭೇಟಿಯ ಹಿಂದೆಯೇ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದ್ದರು. ಈ ಬೆಳವಣಿಗೆ ನಂತರ ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದಿನ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಇಂದಿನ ಸಂಪುಟ ಸಭೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಕಳುಹಿಸಲು ನಿರ್ಣಯ ಅಂಗೀಕರಿಸಲಾಯಿತು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.
ಪ್ರಶಸ್ತಿಯನ್ನು ಯಾವಾಗ, ಎಲ್ಲಿ ಪ್ರದಾನ ಮಾಡಬೇಕೆಂದು ಮುಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಲಿದೆ.