ಸಿಕ್ಕಿಂ: ಈಶಾನ್ಯ ಭಾರತದಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಸಿಕ್ಕಿಂನ ಚಟಾನ್‌ನಲ್ಲಿರುವ ಸೇನಾ ಶಿಬಿರದ ಮೇಲೆ ಮಣ್ಣು ಜರಿದು ಬಿದ್ದು ಮೂವರು ಭದ್ರತಾ ಸಿಬ್ಬಂದಿ ಸಾವಿಗೀಡಾಗಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ.
ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಭಾರೀ ಮಳೆಯಿಂದಾಗಿ ಈ ಘಟನೆ ಸಂಭವಿಸಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ತಕ್ಷಣದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಇದುವರೆಗೆ ಮೂರು ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇನ್ನೂ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಣೆಯಾದ ಉಳಿದ ಆರು ಜನರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಸಿಕ್ಕಿಂನಲ್ಲಿ ಭೂಕುಸಿತ ಉಂಟಾಗುತ್ತಿದೆ. ತೀಸ್ತಾ ನದಿ ಅಪಾಯದ ಮಟ್ಟಕ್ಕಿಂತ ಹೆಚ್ಚು ಹರಿಯುತ್ತಿರುವುದರಿಂದ ರಾಜ್ಯದ ಹಲವು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಉತ್ತರ ಸಿಕ್ಕಿಂನ ಥೀಂಗ್ ಮತ್ತು ಚುಂಗ್‌ಥಾಂಗ್‌ನಲ್ಲಿ ಭೂಕುಸಿತ ಸಂಭವಿಸಿ ಹಲವಾರು ರಸ್ತೆಗಳು ಮುಚ್ಚಲ್ಪಟ್ಟಿವೆ.
ಅಸ್ಸಾಂ, ಮಣಿಪುರ, ಅರುಣಾಚಲ ಪ್ರದೇಶ, ತ್ರಿಪುರ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಅಸ್ಸಾಂನ ಹಲವಾರು ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನರು ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.
ನೈಋತ್ಯ ಮಾನ್ಸೂನ್ ಆಗಮನದೊಂದಿಗೆ ಅರುಣಾಚಲ ಪ್ರದೇಶದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಮಳೆಯಾಗಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಜನರು ಜಾಗರೂಕರಾಗಿರಬೇಕು ಮತ್ತು ಸರ್ಕಾರ ಅಗತ್ಯ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.