ರಾಮತೀರ್ಥ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ; ತಪ್ಪಿದ ಭಾರಿ ದುರಂತ, ಏಕಮುಖ ಸಂಚಾರ ವ್ಯವಸ್ಥೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮುಂಗಾರು ಮಳೆಯ ಪರಿಣಾಮ ಹೊನ್ನಾವರ ತಾಲೂಕಿನ ರಾಮತೀರ್ಥ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾರಿ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡದ ಮಣ್ಣು ಹಾಗೂ ಬಂಡೆಗಳು ಹೆದ್ದಾರಿಯ ಮೇಲೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ಅದೃಷ್ಟವಶಾತ್ ಗುಡ್ಡ ಕುಸಿದ ಕ್ಷಣದಲ್ಲಿ ಆ ಮಾರ್ಗದಲ್ಲಿ ಯಾವುದೇ ವಾಹನಗಳು ಸಂಚರಿಸುತ್ತಿರಲಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ಭಾರೀ ದುರಂತ ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಸ್ಥಳೀಯರ ಮಾಹಿತಿ ಪ್ರಕಾರ, ನಿರಂತರ ಮಳೆಯಿಂದಾಗಿ ಗುಡ್ಡದ ಮಣ್ಣು ಇನ್ನೂ ಜರುಗುತ್ತಲೇ ಇದೆ.

ಘಟನೆ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹಾಗೂ ಐಆರ್‌ಬಿ (IRB) ಸಂಸ್ಥೆಯ ಸಿಬ್ಬಂದಿ ಜೆಸಿಬಿ ಯಂತ್ರಗಳೊಂದಿಗೆ ಸ್ಥಳಕ್ಕಾಗಮಿಸಿ ಹೆದ್ದಾರಿಯ ಮೇಲಿದ್ದ ಮಣ್ಣು ಮತ್ತು ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಿದ್ದಾರೆ.

ಸಂಚಾರ ಸಂಪೂರ್ಣ ಸ್ಥಗಿತವಾಗದಂತೆ ತಡೆಯುವ ಉದ್ದೇಶದಿಂದ ಸದ್ಯ ವಾಹನಗಳಿಗೆ ಏಕಮುಖ ಸಂಚಾರಕ್ಕೆ ಮಾತ್ರ ತಾತ್ಕಾಲಿಕ ಅವಕಾಶ ಕಲ್ಪಿಸಲಾಗಿದೆ. ಸ್ಥಳದಲ್ಲಿ ಸಂಚಾರ ನಿಯಂತ್ರಣಕ್ಕಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇನ್ನೊಂದೆಡೆ, ಗುಡ್ಡದ ಮೇಲ್ಭಾಗದಲ್ಲಿ ಈಗಾಗಲೇ ದೊಡ್ಡ ಬಿರುಕುಗಳು ಕಾಣಿಸಿಕೊಂಡಿರುವುದರಿಂದ ಮತ್ತಷ್ಟು ಮಣ್ಣು ಕುಸಿಯುವ ಅಪಾಯವಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಹಾಗೂ ನಿಧಾನವಾಗಿ ವಾಹನ ಚಲಾಯಿಸುವಂತೆ ಮನವಿ ಮಾಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು