ಹೈದರಾಬಾದ್: ಕೇಂದ್ರೀಯ ವಿಶ್ವವಿದ್ಯಾನಿಲಯಗಳು ಸೇರಿದಂತೆ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿಸುವ ಕ್ರಮವನ್ನು ಬಲವಾಗಿ ವಿರೋಧಿಸಿ, ತೆಲಂಗಾಣ ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಕೆ.ಟಿ.ರಾಮರಾವ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಂಸತ್ತಿನ ಅಧಿಕೃತ ಭಾಷೆಯ ಸಮಿತಿಯು, ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿ ಮಾಡಲು ಶಿಫಾರಸು ಮಾಡಿದೆ. ಹೀಗಾಗಿ ಶಿಫಾರಸು ಸಂವಿಧಾನ ಬಾಹಿರವಾಗಿದ್ದು, ಕೂಡಲೇ ಹಿಂಪಡೆಯಬೇಕು ಎಂದು ರಾಮರಾವ್ ಒತ್ತಾಯಿಸಿದ್ದಾರೆ.
ಸಚಿವರಾದ ಕೆಟಿಆರ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ, ಪ್ರಸ್ತುತವಾಗಿ ಪರೋಕ್ಷವಾಗಿ ಹಿಂದಿ ಹೇರಿಕೆಯು ಕೋಟ್ಯಂತರ ಯುವಕರ ಜೀವನವನ್ನು ಹೇಗೆ ಹಾಳುಮಾಡುತ್ತಿದೆ ಎಂಬುದರ ಕುರಿತು ವಿವರಿಸಲಾಗಿದ್ದು, ಕೇಂದ್ರೀಯ ಉದ್ಯೋಗಗಳಿಗೆ ನೀಡುವ ಅರ್ಹತಾ ಪರೀಕ್ಷೆಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಪ್ರಶ್ನೆಗಳು ಇರುವುದರಿಂದ ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಉದ್ಯೋಗಾವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅಮಿತ್ ಶಾ ಸಮಿತಿ ನೀಡಿರುವ ಶಿಪಾರಸು ʼಪ್ರಸ್ತುತ ಮತ್ತು ಭವಿಷ್ಯದʼ ಪೀಳಿಗೆಯ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದರು.