ಧಾರವಾಡ: ಇತ್ತೀಚೆಗೆ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಸಾವಿನ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಒಬ್ಬರು ಸಜೀವ ದಹನವಾಗಿದ್ದಾರೆ.
ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರ ವಲಯದಲ್ಲಿ ಈ ಭೀಕರ ಘಟನೆ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆಗಿದ್ದ ಪಂಚಾಕ್ಷರಿ ಸಾಲಿಮಠ ಮೃತಪಟ್ಟವರು.
ನಿನ್ನೆ i20 ಕಾರಿನಲ್ಲಿ ಗದಗ ಕಡೆಗೆ ಪ್ರಯಾಣಿಸುತ್ತಿದ್ದ ಪಂಚಾಕ್ಷರಿ ಸಾಲಿಮಠ ಅವರ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ (ಡಿವೈಡರ್‌ಗೆ) ಅಪ್ಪಳಿಸಿದೆ. ಡಿಕ್ಕಿಯಾದ ತಕ್ಷಣ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ ಕಾರಣ, ಪಂಚಾಕ್ಷರಿ ಅವರಿಗೆ ಕಾರಿನ ಲಾಕ್ ತೆಗೆದು ಹೊರಬರಲು ಸಾಧ್ಯವಾಗಲಿಲ್ಲ. ಇದರ ಪರಿಣಾಮವಾಗಿ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣ ಧಾವಿಸಿ ಬೆಂಕಿ ನಂದಿಸಿದರು. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
