ಬೆಂಗಳೂರು : ಕರುನಾಡಲ್ಲಿ ಚಳಿ (Winter) ವ್ಯಾಪಿಸಿದ್ದು, ಮೈ ಕೊರೆಯುವ ಚಳಿಗೆ (Cold) ಜನರು ತತ್ತರಿಸಿದ್ದಾರೆ. ಈ ನಡುವೆ ಮಳೆ ಭೀತಿ ಶುರುವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಹಲವು ಕಡೆ ಭಾರಿ ಶೀತಗಾಳಿ ಮುಂದುವರೆಯಲಿದ್ದು, ಬೀದರ್, ಕಲಬುರಗಿ, ವಿಜಯಪುರ, ಧಾರವಾಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ ಎನ್ನಲಾಗಿದೆ.ಹಾಗೆಯೇ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು. ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.
ಜನವರಿ 25 ರವರೆಗೂ ಚಳಿ ಮುಂದುವರಿಯಲಿದೆ. ಹಾಗೆಯೇ ಜನವರಿ 15 ರ ವರೆಗೆ ತುಂತುರು ಮಳೆ ಸುರಿಯಲಿದೆ ಎನ್ನಲಾಗಿದ್ದು, ಹವಾಮಾನ ಏರುಪೇರಿನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿಯೇ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
