ಮಹಾರಾಷ್ಟ್ರ: ಲಾರಿಗೆ ಬೊಲೆರೊ ವ್ಯಾನ್ ಡಿಕ್ಕಿ, ಆರು ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿ 9 ಮಂದಿ ಸಾವು

ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಒಟ್ಟು ಒಂಬತ್ತು ಮಂದಿ ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ನಾಗ್ಪುರ-ರಾಯ್‌ಪುರ ರಾಷ್ಟ್ರೀಯ ಹೆದ್ದಾರಿಯ ಪಿಂಪಲ್‌ಗಾಂವ್ ಸಮೀಪ ಈ ದುರಂತ ಸಂಭವಿಸಿದೆ. ರಸ್ತೆ ಬದಿಯ ಪೆಟ್ರೋಲ್ ಬಂಕ್‌ನಿಂದ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದ ಲಾರಿಗೆ ಅತಿವೇಗವಾಗಿ ಬಂದ ಬೊಲೆರೊ ಪಿಕಪ್ ವ್ಯಾನ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ಸಕೋಲಿ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಸ್ಥಳದ ಸಮೀಪವಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಬೊಲೆರೊ ವಾಹನ ಅತಿಯಾದ ವೇಗದಲ್ಲಿದ್ದುದ್ದು ಪತ್ತೆಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು