ಮಂಗಳೂರು: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಧನದ ಭೀತಿ ಎದುರಾಗಿದೆ.
ಅಕ್ರಮವಾಗಿ ಎರಡು ತಲ್ವಾರ್‌ಗಳು ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಅವರಿಗೆ ಇದುವರೆಗೆ ಮೂರನೇ ನೋಟಿಸ್ ಜಾರಿ ಮಾಡಿದ್ದಾರೆ.
ಈ ಹಿಂದೆ ಎರಡು ನೋಟಿಸ್‌ಗಳನ್ನು ಜಾರಿ ಮಾಡಿದ್ದರೂ ಮಹೇಶ್ ಶೆಟ್ಟಿ ತಿಮರೋಡಿ ಅವರು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 26 ರಂದು ಬೆಳ್ತಂಗಡಿ ಪೊಲೀಸರು ಅವರ ಮನೆಗೆ ತೆರಳಿ ಮೂರನೇ ನೋಟಿಸ್ ಅನ್ನು ಅಂಟಿಸಿದ್ದಾರೆ.
ಈ ನೋಟಿಸ್‌ನಲ್ಲಿ ಸೆಪ್ಟೆಂಬರ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಜಾಮೀನು ಅರ್ಜಿಯ ವಿಚಾರಣೆ ಇಂದು:
ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಜಾಮೀನು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಮಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಇಂದು (ಶನಿವಾರ) ನಡೆಯಲಿದೆ. ನ್ಯಾಯಾಲಯದ ತೀರ್ಪು ಬರುವವರೆಗೆ ಅವರು ಪೊಲೀಸ್ ಠಾಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ.
ಗಡಿಪಾರು ಆದೇಶ:
ಈ ನಡುವೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಕಳೆದ 10 ದಿನಗಳಿಂದ ತಲೆಮರೆಸಿಕೊಂಡಿದ್ದಾರೆ. ಇದೇ ಸಮಯದಲ್ಲಿ, ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶವನ್ನೂ ಹೊರಡಿಸಿದ್ದಾರೆ.