ಹೊಸದಿಲ್ಲಿ, ನವೆಂಬರ್ 10: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಶೂಟರ್ ಶಿವಕುಮಾರ್ ಅವರನ್ನು ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಆದೇಶದ ಮೇರೆಗೆ ಕೊಲೆ ಮಾಡಿರುವುದಾಗಿ ಶಿವಕುಮಾರ್ ಪೊಲೀಸರ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾನೆ ಎಂದು ತಿಳಿದುಬಂದಿದೆ.
ಮುಂಬೈ ಕ್ರೈಂ ಬ್ರಾಂಚ್ ಮತ್ತು ಯುಪಿ ಎಸ್‌ಟಿಎಫ್ ಆರೋಪಿ ಶಿವಕುಮಾರ್ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಿದ್ದಾರೆ. ಆತನಿಗೆ ಆಶ್ರಯ ನೀಡಿದ ಇತರ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೆ 23 ಮಂದಿಯನ್ನು ಬಂಧಿಸಿದ್ದಾರೆ. ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾದಲ್ಲಿ ಮೂವರು ದುಷ್ಕರ್ಮಿಗಳು ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ ನಡೆಸಿದ್ದರು.