ಕಾಂಗ್ರೆಸ್‌ನಲ್ಲಿ ಟಿಎಂಸಿ ವಿಲೀನ ಪ್ರಸ್ತಾವನೆ: ಸೋನಿಯಾ ಗಾಂಧಿ ಆಫರ್, ಸಕಾರಾತ್ಮಕ ಸ್ಪಂದನೆ ತೋರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಆಡಳಿತಾರೂಢ ಪಕ್ಷವಾದ ತೃಣಮೂಲ ಕಾಂಗ್ರೆಸ್ (TMC) ಅನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸುವ ಮಹತ್ವದ ಪ್ರಸ್ತಾವನೆಯನ್ನು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಟಿಎಂಸಿ ಅಧಿನೇತ್ರಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮುಂದೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಭೇಟಿಯ ಸಂದರ್ಭದಲ್ಲಿ ಉಭಯ ನಾಯಕಿಯರು ಬಂಗಾಳ ಮತ್ತು ರಾಷ್ಟ್ರೀಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಪ್ರಸ್ತುತ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ತೀವ್ರ ರಾಜಕೀಯ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಪಕ್ಷದ ಹಲವು ಶಾಸಕರು, ಸಂಸದರು ಮತ್ತು ಹಿರಿಯ ನಾಯಕರು ಬಿಜಿಪಿಯ ಸರಣಿ ಯಶಸ್ಸು ಮತ್ತು ಒತ್ತಡದ ಕಾರಣದಿಂದ ಪಕ್ಷ ತೊರೆಯುತ್ತಿದ್ದಾರೆ. ಮಮತಾ ಬ್ಯಾನರ್ಜಿ ಅವರಿಗೆ ಅತ್ಯಂತ ಆಪ್ತರೆನಿಸಿಕೊಂಡ ನಾಯಕರು ಸಹ ಟಿಎಂಸಿ ತೊರೆಯುತ್ತಿರುವುದು ಪಕ್ಷದ ಭವಿಷ್ಯದ ಕುರಿತು ಆತಂಕ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ, ಸೋನಿಯಾ ಗಾಂಧಿ ಅವರು ಟಿಎಂಸಿ ಪಕ್ಷವನ್ನು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸುವಂತೆ ಮಮತಾ ಬ್ಯಾನರ್ಜಿ ಅವರಿಗೆ ಮಹತ್ವದ ಸಲಹೆ ನೀಡಿದರು. ಈ ಪ್ರಸ್ತಾವನೆಗೆ ಮಮತಾ ಬ್ಯಾನರ್ಜಿ ತಕ್ಷಣದ ನಿರ್ಧಾರ ಪ್ರಕಟಿಸಿಲ್ಲ ಎಂದು ತಿಳಿದುಬಂದಿದೆ. ಬದಲಿಗೆ, ಈ ಕುರಿತು ಯೋಚಿಸಿ ನಿರ್ಧಾರ ಕೈಗೊಳ್ಳಲು ಸ್ವಲ್ಪ ಸಮಯಾವಕಾಶ ಕೇಳಿದ್ದು, ಕೆಲ ದಿನಗಳ ನಂತರ ತಮ್ಮ ನಿಲುವನ್ನು ತಿಳಿಸುವುದಾಗಿ ಉತ್ತರಿಸಿದ್ದಾರೆ ಎನ್ನಲಾಗಿದೆ.

ಪದವಿ ಮತ್ತು ನಾಯಕತ್ವದ ಕುರಿತು ಚರ್ಚೆ: ಚರ್ಚೆಯ ಸಂದರ್ಭದಲ್ಲಿ, ಪಕ್ಷ ವಿಲೀನಗೊಂಡರೆ ಕಾಂಗ್ರೆಸ್‌ನಲ್ಲಿ ನಾಯಕತ್ವದ ಹಂಚಿಕೆ ಮತ್ತು ತಮ್ಮ ಸ್ಥಾನಮಾನದ ಕುರಿತು ಮಮತಾ ಬ್ಯಾನರ್ಜಿ ಕೆಲವು ಸಂದೇಹಗಳನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, ಟಿಎಂಸಿ ಕಾಂಗ್ರೆಸ್‌ನಲ್ಲಿ ವಿಲೀನವಾದರೆ ಮಮತಾ ಬ್ಯಾನರ್ಜಿ ಅವರಿಗೆ ‘ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ’ ಹುದ್ದೆಯನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಅಷ್ಟೇ ಅಲ್ಲದೆ, ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೂ ಕಾಂಗ್ರೆಸ್‌ನಲ್ಲಿ ‘ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ’ ಹುದ್ದೆಯನ್ನು ನೀಡಲು ಕಾಂಗ್ರೆಸ್ ಹೈಕಮಾಂಡ್ ಸಮ್ಮತಿಸಿದೆ ಎನ್ನಲಾಗಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ, ಅಭಿಷೇಕ್ ಬ್ಯಾನರ್ಜಿ ಅವರು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಪ್ರಚಲಿತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.

ಇತ್ತೀಚೆಗೆ ನಡೆದ ‘ಇಂಡಿಯಾ’ (I.N.D.I.A.) ಮೈತ್ರಿಕೂಟದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದರು ಮತ್ತು ಕಾಂಗ್ರೆಸ್ ಸೇರಿದಂತೆ ಮೈತ್ರಿಕೂಟದ ಪಕ್ಷಗಳೊಂದಿಗೆ ಒಗ್ಗೂಡಿ ಕೆಲಸ ಮಾಡಲು ಟಿಎಂಸಿ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದ್ದರು. ಈ ಹಿನ್ನೆಲೆಯಲ್ಲಿ, ಮುಂಬರುವ ದಿನಗಳಲ್ಲಿ ಟಿಎಂಸಿ ಕಾಂಗ್ರೆಸ್‌ನಲ್ಲಿ ವಿಲೀನವಾಗುವ ಕುರಿತು ಹೆಚ್ಚಿನ ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು