Home ರಾಜ್ಯ ಬೆಳಗಾವಿ ಬೆಲೆ ಏರಿಕೆ ವಿರೊಧಿಸಿ ಕೇಂದ್ರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ : ಲಕ್ಷ್ಮೀ ಹೆಬ್ಬಾಳ್ಕರ್‌

ಬೆಲೆ ಏರಿಕೆ ವಿರೊಧಿಸಿ ಕೇಂದ್ರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ : ಲಕ್ಷ್ಮೀ ಹೆಬ್ಬಾಳ್ಕರ್‌

0

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಪ್ರಿಲ್ 27 ಅಥವಾ 28 ರಂದು ಬೃಹತ್ ಪ್ರತಿಭಟನೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಮಂಗಳವಾರ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಅಗತ್ಯ ವಸ್ತುಗಳ ಬೆಲೆ ಏರಿಕೆ, ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತು ಕೇಂದ್ರದ ನೀತಿ ವಿರುದ್ಧ ಪ್ರತಿಭಟಿಸಲಾಗುವುದು ಎಂದರು.

ಕೇಂದ್ರ ಸರಕಾರ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ದರವನ್ನು ಏರಿಕೆ ಮಾಡಿ, ಬಡವರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಬಿಜೆಪಿ ನಾಯಕರು ತಮ್ಮ ಒಳಬೇಗುದಿಯನ್ನು ಮರೆಯಾಚಿಸುವ ಸಲುವಾಗಿ ರಾಜ್ಯ ಸರಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಹುಟ್ಟಿಕೊಂಡಿದ್ದೇ ಬೆಲೆ ಏರಿಕೆಯ ಕಾರಣದಿಂದ, ಗ್ಯಾರಂಟಿ ಯೋಜನೆಗಳಿಂದ ಬೆಲೆ ಏರಿಕೆಯಾಗುತ್ತಿದೆ ಎನ್ನುತ್ತಿರುವುದು ಶುದ್ಧ ಸುಳ್ಳು. ಬಿಜೆಪಿ ನಾಯಕರ ನಡುವಿನ ಆಂತರಿಕ ಕಚ್ಚಾಟವನ್ನು ಮರೆಮಾಚಲು ಜನರ ದಾರಿ ತಪ್ಪಿಸುವ ಸಲುವಾಗಿ ಜನಾಕ್ರೋಶ ಯಾತ್ರೆ ಮಾಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ರಾಷ್ಟ್ರೀಯ ನಾಯಕರು ಪ್ರತಿಭಟನೆಯಲ್ಲಿ ಭಾಗಿ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ರಾಷ್ಟ್ರೀಯ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದರು.

ನಗರದ ಸಿಪಿಎಡ್ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ, ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ತನಿಖೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕರಿಗೆ ಕಿರುಕುಳ

ಕಾಂಗ್ರೆಸ್ ನಾಯಕರ ಧ್ವನಿಯನ್ನು ದಮನ ಮಾಡುವ ಉದ್ದೇಶದಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪಕ್ಷದ ಮುಖಂಡರ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆ. ಇದರ ಬಗ್ಗೆ ಸತ್ಯಾಸತ್ಯತೆಯನ್ನು ಎಲ್ಲರೂ ಪರಿಶೀಲನೆ ಮಾಡಬೇಕು. ಬಿಜೆಪಿಯವರು ನ್ಯಾಷನಲ್ ಹೆರಾಲ್ಡ್ ಆಸ್ತಿ 5 ಸಾವಿರ ಕೋಟಿ ಇದೆ ಅಂತಾರೆ. ಆದರೆ ಐಟಿಯವರೇ 359 ಕೋಟಿ ಅಂತಾ ಹೇಳುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಸುಳ್ಳುಗಳನ್ನು ಸತ್ಯ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಯಾಕೆ ತರಲಾಯಿತು ಅನ್ನೋದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಜನರ ದಾರಿ ತಪ್ಪಿಸುವುದೇ ಬಿಜೆಪಿಯವರ ಕೆಲಸ. ಜನ ಸಾಮಾನ್ಯರ ಬದಲಿಗೆ ಕೇಂದ್ರ ಸರಕಾರ ಅಂದಾನಿ, ಅಂಬಾನಿಯವರಿಗಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಆರೋಪಿಸಿದರು

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರ ಸಚಿವರಾದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

You cannot copy content of this page

Exit mobile version