ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸಚಿವ ಕೆ.ಎನ್. ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣವು ತಾರ್ಕಿಕ ಅಂತ್ಯ ಕಂಡಿದೆ. ರಾಜಕೀಯವಾಗಿ ತಮ್ಮನ್ನು ಸುಮ್ಮನಾಗಿಸಲು ಹನಿಟ್ರ್ಯಾಪ್ ತಂತ್ರ ಬಳಸಲಾಗಿದೆ ಎಂದು ಸಚಿವರು ಮಾಡಿದ್ದ ಆರೋಪಗಳು ನಿರಾಧಾರ ಎಂದು ಸಿಐಡಿ ತನಿಖೆಯಿಂದ ದೃಢಪಟ್ಟಿದೆ.
ಕಳೆದ ಏಳು ತಿಂಗಳಿಂದ ಈ ಪ್ರಕರಣವನ್ನು ವಿವಿಧ ಆಯಾಮಗಳಿಂದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು, ರಾಜಣ್ಣ ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಉಲ್ಲೇಖಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.
ಕಳೆದ ವಿಧಾನಸಭಾ ಅಧಿವೇಶನದ ವೇಳೆ ರಾಜಣ್ಣ ಅವರ ಹನಿಟ್ರ್ಯಾಪ್ ವಿಚಾರವು ವ್ಯಾಪಕವಾಗಿ ಚರ್ಚೆಗೆ ಒಳಗಾಗಿತ್ತು. ರಾಜಣ್ಣ ಮತ್ತು ಅವರ ಪುತ್ರನ ಪೆನ್ ಡ್ರೈವ್ ಇದೆ ಎಂಬ ವದಂತಿಗಳು ಹಬ್ಬಿದ್ದವು. ಇದರ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೈವಾಡವಿದೆ ಎಂಬ ಆರೋಪವೂ ಕೇಳಿಬಂದಿತ್ತು. ಈ ಎಲ್ಲ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದರು.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡವು ಸಚಿವರ ಬೆಂಗಳೂರು ಹಾಗೂ ಮಧುಗಿರಿಯ ಮನೆಯಲ್ಲಿ ಎರಡು ಬಾರಿ ಪರಿಶೀಲನೆ ನಡೆಸಿತ್ತು. ಸಚಿವರ ಆಪ್ತ ಸಹಾಯಕರು, ಭದ್ರತಾ ಸಿಬ್ಬಂದಿ ಮತ್ತು ಮನೆಯ ಕೆಲಸಗಾರರನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು. ತನಿಖೆಯ ಆಧಾರದ ಮೇಲೆ, ಸಚಿವರ ಆರೋಪಗಳಿಗೆ ಯಾವುದೇ ಆಧಾರವಿಲ್ಲ ಎಂದು ಸಿಐಡಿ ತನ್ನ ಅಂತಿಮ ವರದಿಯಲ್ಲಿ ಸರ್ಕಾರಕ್ಕೆ ಸ್ಪಷ್ಟಪಡಿಸಿದೆ.