ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಇದರ ಬೆನ್ನಲ್ಲೇ ಪ್ರತಿಪಕ್ಷಗಳು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಈ ನಡುವೆಯೇ ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷಗಳು ರಾಜ್ಯಪಾಲರ ದೂರಲ್ಲಿ ಸಚಿವ ನಾಗೇಂದ್ರ ತಲೆದಂಡಕ್ಕೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರ ತಂಡ ಇಂದು ರಾಜ್ಯಪಾಲರ ಭೇಟಿ ಮಾಡಿದ್ದು, ಸಚಿವ ನಾಗೇಂದ್ರ ಅವರನ್ನು ವಜಾ ಮಾಡಲು ರಾಜ್ಯಪಾಲರಿಗೆ ಒತ್ತಾಯ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆತ್ಮಹತ್ಯೆಗೆ ನೇರವಾಗಿ ಉನ್ನತಾಧಿಕಾರಿಗಳು ಕಾರಣ ಎಂದು ಬರೆಯಲಾಗಿದೆ. ಇದರ ಹಿಂದೆ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ಸ್ಪಷ್ಟ ತನಿಖೆ ಆಗಬೇಕು, ಇದಕ್ಕಾಗಿ ರಾಜ್ಯಪಾಲರು ಸಚಿವ ಬಿ.ನಾಗೇಂದ್ರ ಅವರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಎಸ್ಟಿ ಕಲ್ಯಾಣಕ್ಕಾಗಿ ಮೀಸಲಿರಿಸಲಾಗಿದ್ದ 187 ಕೋಟಿ ರೂ.ಗಳಲ್ಲಿ 90 ಕೋಟಿ ರೂ.ಗಳ ಹಣವನ್ನು ಬಹು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಅವರು ನಾಗೇಂದ್ರ ಅವರನ್ನು ಕರೆಸಿ ರಾಜೀನಾಮೆ ಕೇಳಲು ಕಾರಣವಾದ ಸಂದರ್ಭಗಳನ್ನು ವಿವರಿಸಿದ್ದಾರೆ ಎಂದು ವರದಿಯಾಗಿದೆ.
ಪ್ರತಿಪಕ್ಷಗಳು ಈ ವಿಚಾರನ್ನು ದೊಡ್ಡದಾಗಿ ಮಾಡಿ ರಾಜಕೀಯ ಮಾಡುವ ಮೊದಲೇ ಸಿಎಂ ಮಹತ್ವದ ನಿರ್ಧಾರ ತೆಗೆದುಕೊಂಡು ಬಿ.ನಾಗೇಂದ್ರ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.