ದಾವಣಗೆರೆ: ಸಹಕಾರ ಸಚಿವರಾಗಿದ್ದ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಅಗೌರವ ತೋರಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವುದಾಗಿ ಹೇಳುವ ಕಾಂಗ್ರೆಸ್, ಅದೇ ಸಮುದಾಯದ ನಾಯಕರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು. ರಾಜಣ್ಣ ಅವರಂತಹ ಹಿರಿಯ ನಾಯಕರಿಂದ ಗೌರವಯುತವಾಗಿ ರಾಜೀನಾಮೆ ಪಡೆಯುವ ಅವಕಾಶ ಕಾಂಗ್ರೆಸ್‌ಗೆ ಇತ್ತು, ಆದರೆ ಏಕಾಏಕಿ ಅವರನ್ನು ಸಂಪುಟದಿಂದ ಕಿತ್ತುಹಾಕಿ ಮುಜುಗರಕ್ಕೀಡು ಮಾಡಿದೆ ಎಂದು ಅವರು ಟೀಕಿಸಿದರು.
‘ಆಂತರಿಕ ಪ್ರಜಾಪ್ರಭುತ್ವವಿಲ್ಲ’
“ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಸತ್ಯವನ್ನು ನುಡಿದ ರಾಜಣ್ಣ ಅವರನ್ನು ಬಲಿಪಶು ಮಾಡಲಾಗಿದೆ. ಮತ ಕಳ್ಳತನದ ಬಗ್ಗೆ ರಾಜಣ್ಣ ನೀಡಿದ ಹೇಳಿಕೆಯಲ್ಲಿ ತಪ್ಪೇನಿದೆ?” ಎಂದು ನಿಖಿಲ್ ಪ್ರಶ್ನಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮೈತ್ರಿ ಮುಂದುವರಿಕೆ
ಇದೇ ವೇಳೆ, ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ನಿಖಿಲ್, “ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲ ಚುನಾವಣೆಗಳಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು. ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸುವ ಪ್ರಸ್ತಾವನೆಗೆ ಬಿಜೆಪಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಸಿದ್ಧಪಡಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದರು.
“ವಿಧಾನಸಭಾ ಚುನಾವಣೆಗೂ ಮುನ್ನ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕರ್ತರಿಗೆ ಅಧಿಕಾರ ಸಿಕ್ಕರೆ ವಿಧಾನಸಭಾ ಚುನಾವಣೆ ಸುಲಭವಾಗಲಿದೆ. ಪಕ್ಷ ಸಂಘಟನೆಗೆ ಒತ್ತು ನೀಡಲು ಮತ್ತು ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸಲು ರಾಜ್ಯದಲ್ಲಿ ಎರಡು ಸಮಾವೇಶಗಳನ್ನು ನಡೆಸಲು ತೀರ್ಮಾನಿಸಲಾಗಿದೆ” ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.