ಬೆಂಗಳೂರು: ರಾಜ್ಯದಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪರಿಸರಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳ ಬಳಕೆಯನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ತಿಳಿಸಿದ ಸಚಿವರು, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳನ್ನು ಯಾವುದೇ ಕಾರಣಕ್ಕೂ ಅನುಮತಿಸದಂತೆ ಅಧಿಕಾರಿಗಳಿಗೆ ಸೂಚಿಸಿದರು. ಏಕಬಳಕೆಯ ಪ್ಲಾಸ್ಟಿಕ್ ನಿಷೇಧವಿದ್ದರೂ ಮಾರುಕಟ್ಟೆಯಲ್ಲಿ ಬಳಕೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಸಂಬಂಧಿಸಿ ಬಿಬಿಎಂಪಿಗೆ ನೋಟಿಸ್ ಜಾರಿ ಮಾಡುವಂತೆ ತಿಳಿಸಿದರು.
ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳು ಹಾಗೂ ನದಿ ತೀರದ ಕಾರ್ಖಾನೆಗಳ ತ್ಯಾಜ್ಯನೀರು ಸಂಸ್ಕರಣಾ ಘಟಕಗಳ (STP) ನಿರ್ವಹಣೆಯನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲು ಸೂಚಿಸಲಾಗಿದೆ. 80ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಲ್ಲಿ ಎಸ್‌ಟಿಪಿ ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೆ 15 ದಿನಗಳ ಕಾಲಾವಕಾಶ ನೀಡಿ ನೋಟಿಸ್ ನೀಡಲು ಹಾಗೂ ನದಿಗಳಿಗೆ ಕಲುಷಿತ ನೀರು ಹರಿಸುವ ಕಾರ್ಖಾನೆಗಳು ಎಸ್‌ಟಿಪಿಯನ್ನು ಸರಿಪಡಿಸಿಕೊಳ್ಳದಿದ್ದರೆ ಅಂತಹ ಕಾರ್ಖಾನೆಗಳನ್ನೇ ಮುಚ್ಚಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
