ರೌಡಿ ಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ತಿರಸ್ಕರಿಸಿದ ಬಳಿಕ ಬಂಧನಕ್ಕೊಳಗಾಗಿದ್ದ ಬೈರತಿ ಬಸವರಾಜ್ ಅವರು ನಿಯಮಿತ ಜಾಮೀನು ಕೋರಿ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಕಠಿಣ ಷರತ್ತುಗಳೊಂದಿಗೆ ಜಾಮೀನು ನೀಡಲು ಆದೇಶಿಸಿದ್ದಾರೆ.
ಪ್ರಕರಣದ ಸಂಬಂಧ ಆರೋಪಿಯನ್ನು ಈಗಾಗಲೇ ಪೊಲೀಸ್ ವಶದಲ್ಲಿರಿಸಿಕೊಂಡು ವಿಚಾರಣೆ ನಡೆಸಲಾಗಿದೆ ಹಾಗೂ ತನಿಖೆಯ ಪ್ರಮುಖ ಹಂತ ಪೂರ್ಣಗೊಂಡಿದೆ ಎಂದು ತನಿಖಾಧಿಕಾರಿಗಳು ಸಲ್ಲಿಸಿದ್ದ ರಿಮ್ಯಾಂಡ್ ಅರ್ಜಿಯಿಂದ ಸ್ಪಷ್ಟವಾಗುತ್ತದೆ. ಹೀಗಾಗಿ ಮುಂದುವರಿದ ಪೊಲೀಸ್ ವಶದಲ್ಲಿಡುವ ಅಗತ್ಯವಿಲ್ಲವೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೆಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.
ಜಾಮೀನು ಷರತ್ತುಗಳ ಪ್ರಕಾರ ಬೈರತಿ ಬಸವರಾಜ್ ಅವರು 2 ಲಕ್ಷ ರೂಪಾಯಿ ಮೊತ್ತದ ಬಾಂಡ್ ನೀಡಬೇಕು. ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಮತ್ತು ಸಾಕ್ಷ್ಯಗಳನ್ನು ತಿರುಚುವ ಅಥವಾ ನಾಶಪಡಿಸುವ ಪ್ರಯತ್ನ ಮಾಡಬಾರದು ಎಂದು ನ್ಯಾಯಾಲಯ ಸೂಚಿಸಿದೆ. ತನಿಖಾಧಿಕಾರಿಗಳು ಸೂಚಿಸಿದಾಗ ಹಾಜರಾಗುವ ಮೂಲಕ ತನಿಖೆಗೆ ಸಂಪೂರ್ಣ ಸಹಕರಿಸಬೇಕು ಎಂಬುದನ್ನೂ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಇದರ ಜೊತೆಗೆ ವಿಚಾರಣಾ ನ್ಯಾಯಾಲಯದ ವ್ಯಾಪ್ತಿಯನ್ನು ನ್ಯಾಯಾಲಯದ ಅನುಮತಿ ಇಲ್ಲದೆ ಬಿಟ್ಟು ಹೋಗಬಾರದು ಹಾಗೂ ದೇಶ ತೊರೆಯಲು ನ್ಯಾಯಾಲಯದ ಅನುಮತಿ ಕಡ್ಡಾಯವಾಗಿದೆ. ವಿಚಾರಣೆಯ ದಿನಗಳಲ್ಲಿ ನ್ಯಾಯಾಲಯಕ್ಕೆ ತಪ್ಪದೇ ಹಾಜರಾಗಬೇಕು ಮತ್ತು ಅನಗತ್ಯವಾಗಿ ವಿಚಾರಣೆ ಮುಂದೂಡಲು ಮನವಿ ಸಲ್ಲಿಸಬಾರದು ಎಂದು ಸೂಚಿಸಲಾಗಿದೆ. ಜೊತೆಗೆ ಪ್ರತೀ ತಿಂಗಳು ಒಂದು ಬಾರಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಹಾಗೂ ಪಾಸ್‌ಪೋರ್ಟ್ ಅನ್ನು ತನಿಖಾಧಿಕಾರಿಗಳಿಗೆ ಸಲ್ಲಿಸಿರುವ ಕುರಿತು ಪ್ರಮಾಣಪತ್ರ ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
