ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿಯವರ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ’ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಮತ್ತೊಂದು ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಪರ ವಕಾಲತ್ತು ವಹಿಸಿರುವ ಶತಭಿಷ ಶಿವಣ್ಣ ಅವರು ಸೋಮವಾರ ಬೆಳಿಗ್ಗೆ, ಈ ಅರ್ಜಿಯನ್ನು, ‘ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ ನಡೆಸುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ವಿಶೇಷ ನ್ಯಾಯಪೀಠದ ಮುಂದೆ ಮೆಮೊ ಮೂಲಕ ಸಲ್ಲಿಕೆ ಮಾಡಿದ್ದಾರೆ.
ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಿದರು. ‘ಮುಖ್ಯ ನ್ಯಾಯಮೂರ್ತಿಗಳು ಸೂಚಿಸಿದರೆ ಅರ್ಜಿ ವಿಚಾರಣೆ ನಡೆಸುವುದಾಗಿ’ ನ್ಯಾಯಪೀಠ ತಿಳಿಸಿತು.
ಅರ್ಜಿಯಲ್ಲಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿರುವ ಫಿರ್ಯಾದುದಾರರಾದ ಮೈಸೂರಿನ ಸ್ನೇಹಮಯಿ ಕೃಷ್ಣ, ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಮತ್ತು ಹೈಕೋರ್ಟ್ ವಕೀಲ ಎಸ್.ಪಿ.ಪ್ರದೀಪ್ ಕುಮಾರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.