ಮೈಸೂರು: ಕಾಂಗ್ರೆಸ್ಸಿನಲ್ಲಿ ಎರಡು ಬಣಗಳಿರುವುದು ಎಲ್ಲರಿಗೂ ಗೊತ್ತಿದೆ. ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟಿರುವ ಇನ್ನೊಂದು ಬಣದವರು ಮುಡಾ ಹಗರಣ ಬಯಲು ಮಾಡಿದ್ದಾರೆ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದೆ. ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿರುವವರ ಪಾತ್ರ ಇದೆ. ‘ಸಿಡಿ ಫ್ಯಾಕ್ಟರಿ ಬಂದ್ ಆಯ್ತು, ಮುಡಾ ಫ್ಯಾಕ್ಟರಿ ಶುರುವಾಯ್ತು’ ಎಂದು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದರು.
ಮುಖ್ಯಮಂತ್ರಿ ಪತ್ನಿಗೆ 14 ಸೈಟ್ ಹಂಚಿಕೆ ವಿಚಾರದ ಬಗ್ಗೆ ಮುಖ್ಯಮಂತ್ರಿಯ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್. ಪೊನ್ನಣ್ಣ ಸುದೀರ್ಘವಾಗಿ ಮಾತನಾಡಿದ್ದಾರೆ. ಅವರು ಮುಖ್ಯಮಂತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ. ₹62 ಕೋಟಿ ಪರಿಹಾರ ನೀಡಬೇಕು ಎಂದಿದ್ದಾರೆ. ಆದರೆ ಹಲವು ಅಭಿವೃದ್ಧಿ ಹೆಸರಿನಲ್ಲಿ ಭೂ ಸ್ವಾಧೀನವಾಗಿದೆ, ಆ ರೈತರು ಇನ್ನು ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರಿಗೆ ರೇಟ್ ಫಿಕ್ಸ್ ಮಾಡುವಾಗ ಹೀಗೆ ಮಾಡುತ್ತೀರಾ? ರೈತರನ್ನ ಬೀದಿಗೆ ನಿಲ್ಲಿಸಿದ್ದೀರಲ್ಲಾ ಇದು ಸರಿಯೇ? ಎಂದು ಎಚ್‌ಡಿಕೆ ಪ್ರಶ್ನಿಸಿದರು.
ಮುಡಾ ಹಗರಣದ ವಿರುದ್ಧ ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೇ ತಂತ್ರ ಮಾಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಎಂಬುದೂ ನನಗೆ ಗೊತ್ತಿದೆ. ₹62 ಕೋಟಿ ಪರಿಹಾರ ಕೇಳುವ ಮುಖ್ಯಮಂತ್ರಿ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದರು.
ನನ್ನ ಜನತಾ ದರ್ಶನಕ್ಕೆ ಅಡ್ಡಗಾಲು: ಇಂದು ಮಂಡ್ಯದಲ್ಲಿ ಜನತಾ ದರ್ಶನ ನಡೆಸಲಿದ್ದೇನೆ. ಆದರೆ, ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ನಾನು ಜನತಾ ದರ್ಶನ ಮಾಡುತ್ತಿರುವ ದಿನವೇ ಸಚಿವ ಸಂಪುಟ ಸಭೆ ಕರೆದಿದ್ದಾರೆ. ನೀವು ಅಧಿಕಾರಿಗಳನ್ನು ನನ್ನಿಂದ ದೂರ ಇಡಬಹುದು. ಆದರೆ, ಜನರನ್ನು ನನ್ನಿಂದ ದೂರ ಮಾಡಲು ಸಾಧ್ಯವಿಲ್ಲ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಸಂಸದರು ಈ ರೀತಿ ಸಭೆ ಮಾಡಿದಾಗ ಏನು ಮಾಡುತ್ತಿದ್ದಿರಿ? ಚುನಾವಣೆಗೆ ಬಂದು ಜನ ಸ್ಪಂದನ ಕಾರ್ಯಕ್ರಮ ಮಾಡಿದಾಗ ಎಲ್ಲಿ ಹೋಗಿದ್ರಿ? ಈಗ ಜನತಾ ದರ್ಶನಕ್ಕೆ ಅಡ್ಡಿಪಡಿಸುತ್ತಿದ್ದಿರಾ ಎಂದು ಎಚ್‌ಡಿಕೆ ಆಕ್ರೋಶವ್ಯಕ್ತಪಡಿಸಿದರು.