Home ರಾಜಕೀಯ ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ...

ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

0

ಬೆಂಗಳೂರು/ಮೈಸೂರು: ಮೈಸೂರು ಅರಮನೆ ಆವರಣದಲ್ಲಿ ಜರುಗಿದ ನಂದಿಧ್ವಜ ಪೂಜೆಯ ಸಂದರ್ಭದಲ್ಲಿ ಸಚಿವರಾದ ಶಿವರಾಜ ತಂಗಡಗಿ, ಪಿ.ಎಂ. ನರೇಂದ್ರ ಸ್ವಾಮಿ, ಹೆಚ್.ಸಿ. ಬಾಲಕೃಷ್ಣ ಮತ್ತು ಕೆ.ಎಸ್. ಬಸವಂತಪ್ಪ ಅವರಿಗೆ ಪೂಜಾ ಆವರಣಕ್ಕೆ ಪ್ರವೇಶಿಸಲು ಪೊಲೀಸ್ ಅಧಿಕಾರಿಗಳು ನಿರ್ಬಂಧ ವಿಧಿಸಿರುವ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಂತ್ರಿಗಳಿಗೇ ಪ್ರವೇಶ ನಿರಾಕರಿಸುವ ಮೂಲಕ ಅಧಿಕಾರಿಗಳು ತೋರಿರುವ ಉದ್ಧಟತನದ ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಘಟನೆ ನಡೆದ ಕೂಡಲೇ ತಾವು ತಕ್ಷಣವೇ ಮಧ್ಯಪ್ರವೇಶಿಸಿ, ಸಚಿವರು ಪೂಜಾ ಆವರಣ ಪ್ರವೇಶಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತು, ಸಂಯಮ ಹಾಗೂ ಜನಪ್ರತಿನಿಧಿಗಳ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿಯ ಮೂಲಭೂತ ಜವಾಬ್ದಾರಿಯಾಗಿದೆ.

ಆದರೆ, ಅಧಿಕಾರದ ಹೆಸರಿನಲ್ಲಿ ನಡೆಯುವ ಯಾವುದೇ ರೀತಿಯ ಉಡಾಫೆ ಅಥವಾ ಉದ್ಧಟತನದ ವರ್ತನೆಯನ್ನು ಸರ್ಕಾರದ ಮಟ್ಟದಲ್ಲಿ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಸಂಪೂರ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಸಮಗ್ರ ವಿಚಾರಣೆ ನಡೆಸಿ, ಇದಕ್ಕೆ ಹೊಣೆಗಾರರಾದ ಅಧಿಕಾರಿಗಳ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ನಿರ್ದೇಶನ ನೀಡಲಾಗಿದೆ.

ವಿಚಾರಣಾ ವರದಿ ಕೈ ಸೇರಿದ ತಕ್ಷಣವೇ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಸೂಕ್ತ ಹಾಗೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

You cannot copy content of this page

Exit mobile version