ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 800 ಕ್ಕೂ ಅಧಿಕ ಜನರು ಮೃತಪಟ್ಟಿದ್ದು, 2500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತದಿಂದ ಅಗತ್ಯ ನೆರವು ನೀಡುವುದಾಗಿ ಭಾರತ ಸರ್ಕಾರ ಘೋಷಿಸಿದೆ.
ಭೂಕಂಪದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಪೀಡಿತ ರಾಷ್ಟ್ರಕ್ಕೆ ಸಂಪೂರ್ಣ ಮಾನವೀಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, “ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ಕಷ್ಟದ ಸಮಯದಲ್ಲಿ ನಮ್ಮ ಪ್ರಾರ್ಥನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ. ಭಾರತವು ಪೀಡಿತರಿಗೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವು ಮತ್ತು ಪರಿಹಾರವನ್ನು ಒದಗಿಸಲು ಸಿದ್ಧವಾಗಿದೆ” ಎಂದು ಅವರು ಬರೆದಿದ್ದಾರೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ “ಅಫ್ಘಾನ್ ಜನರಿಗೆ ಈ ಅಗತ್ಯದ ಸಮಯದಲ್ಲಿ ಭಾರತ ಸಹಾಯವನ್ನು ನೀಡುತ್ತದೆ. ಮೃತರ ಕುಟುಂಬಗಳಿಗೆ ನಮ್ಮ ಸಂತಾಪಗಳು. ಗಾಯಾಳುಗಳ ಚೇತರಿಕೆಗಾಗಿ ನಮ್ಮ ಪ್ರಾರ್ಥನೆಗಳು” ಎಂದು ಅವರು ಹೇಳಿದ್ದಾರೆ.