ಮುಂಬೈ: ಮಹಾರಾಷ್ಟ್ರದ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಹುಬ್ಬೇರಿಸುವಂತಹ ಘೋಷಣೆಯೊಂದನ್ನು ಮಾಡಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿಯವರ ಫೋಟೋ ಬಳಸುವುದಿಲ್ಲ ಎಂದು ಹೇಳಿದ್ದಾರೆ.
ಸಿಎಂ ಶಿಂಧೆ ನೇತೃತ್ವದ ಬಿಜೆಪಿ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಎನ್‌ಸಿಪಿಯ ಹಿರಿಯ ನಾಯಕ ನವಾಬ್ ಮಲಿಕ್ ಅವರು ಮುಂಬೈನ ಮನ್‌ಖುರ್ದ್-ಶಿವಾಜಿ ನಗರದಿಂದ ಸ್ಪರ್ಧಿಸುತ್ತಿದ್ದಾರೆ. ಅವರು ಸಮಾಜವಾದಿ ಪಕ್ಷದ (ಎಸ್‌ಪಿ) ರಾಜ್ಯಾಧ್ಯಕ್ಷ ಅಬು ಅಸಿಂ ಅಜ್ಮಿ ಅವರನ್ನು ಎದುರಿಸುತ್ತಿದ್ದಾರೆ.
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಮತ್ತು ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ ಗುರುವಾರ ಆ ಕ್ಷೇತ್ರದಲ್ಲಿ ಮಲಿಕ್ ಪರ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ‘ಬಟೆಂಗೆ ಟು ಕಟೆಂಗೆ’ ಕರೆಯನ್ನು ಅಜಿತ್ ಪವಾರ್ ವಿರೋಧಿಸಿದರು. ರಾಜ್ಯದಲ್ಲಿ ತಮ್ಮ ಪಕ್ಷ ಸದಾ ಕೋಮು ಸೌಹಾರ್ದತೆಯನ್ನು ಕಾಪಾಡುತ್ತದೆ ಎಂದರು.
ಮತ್ತೊಂದೆಡೆ, ಎನ್‌ಸಿಪಿ ಅಭ್ಯರ್ಥಿ ನವಾಬ್ ಮಲಿಕ್ ಭೂಗತ ದೊರೆ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರ ಬಿಜೆಪಿ ನಾಯಕರು ಚುನಾವಣೆಯಲ್ಲಿ ತಮ್ಮ ಪಕ್ಷ ಅವರನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.