ದೆಹಲಿ: ದೇಶಾದ್ಯಂತ ವಿವಿಧ ನ್ಯಾಯಾಲಯಗಳಲ್ಲಿ ಸುಮಾರು ಒಂದೂವರೆ ಲಕ್ಷ ನ್ಯಾಯಾಂಗ ನಿಂದನೆ ಪ್ರಕರಣಗಳು ಬಾಕಿ ಇವೆ ಎಂದು ಕೇಂದ್ರ ಬಹಿರಂಗಪಡಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ 1,852 ಪ್ರಕರಣಗಳು ಬಾಕಿ ಉಳಿದಿವೆ ಮತ್ತು ವಿವಿಧ ಹೈಕೋರ್ಟ್‌ಗಳಲ್ಲಿ 1.43 ಲಕ್ಷ ನ್ಯಾಯಾಂಗ ನಿಂದನೆ ಪ್ರಕರಣಗಳು ಬಾಕಿ ಇವೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ರಾಮ್ ಮೇಘವಾಲ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಅವರು ಈ ವಿವರಗಳನ್ನು ನೀಡಿದರು. ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಗ್ರಿಡ್ ಪ್ರಕಾರ, ಮಾರ್ಚ್ 20ರ ಹೊತ್ತಿಗೆ, ಸುಪ್ರೀಂ ಕೋರ್ಟ್‌ನಲ್ಲಿ 1,852 ಪ್ರಕರಣಗಳು ಬಾಕಿ ಉಳಿದಿದ್ದರೆ, ಮಾರ್ಚ್ 24ರ ಹೊತ್ತಿಗೆ, ವಿವಿಧ ಹೈಕೋರ್ಟ್‌ಗಳಲ್ಲಿ ನ್ಯಾಯಾಂಗ ನಿಂದನೆ ಅಪರಾಧಗಳಿಗೆ ಸಂಬಂಧಿಸಿದ 1,43,573 ಪ್ರಕರಣಗಳು ಬಾಕಿ ಉಳಿದಿವೆ.
ಆಯಾ ನ್ಯಾಯಾಲಯಗಳ ಮುಂದಿರುವ ನ್ಯಾಯಾಂಗ ನಿಂದನೆ ಪ್ರಕರಣಗಳಲ್ಲಿ ಆದೇಶಗಳನ್ನು ಪಾಲಿಸದಿರಲು ಸರ್ಕಾರಕ್ಕೆ ಯಾವುದೇ ಕಾರಣಗಳಿಲ್ಲ ಎಂದು ಸಚಿವರು ಹೇಳಿದರು. ನ್ಯಾಯಾಲಯದ ಆದೇಶಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಸಂಬಂಧಿತ ಆಡಳಿತ ಸಚಿವಾಲಯಗಳು ಮತ್ತು ಇಲಾಖೆಗಳ ಮೇಲಿದೆ ಎಂದು ಅವರು ಹೇಳಿದರು.