ದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಜುಲೈ 20 ರಂದು ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಗೃಹ ಸಚಿವ ಅಮಿತ್ ಶಾ ನಡುವೆ ಸಂಸತ್ತಿನಲ್ಲಿ ತೀವ್ರ ವಾಗ್ವಾದ ನಡೆದಿದೆ. ಈ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ವಿದ್ಯಾರ್ಥಿಗಳ ಚಳವಳಿಯ ಕುರಿತು ಸಂಸತ್ತಿನಲ್ಲಿ ಸುದೀರ್ಘ ಚರ್ಚೆ ನಡೆಸಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಈ ವಿಷಯದ ಕುರಿತು ಚರ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಈಗಾಗಲೇ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬಿಸಿನೆಸ್ ಅಡ್ವೈಸರಿ ಕಮಿಟಿ (BAC) ಸಭೆಯಲ್ಲಿ ತಿಳಿಸಿದ್ದಾರೆ ಎಂದು ಶಾರವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಸ್ಪೀಕರ್ ಅವರು ವಿಪಕ್ಷ ನಾಯಕರೊಂದಿಗೆ ಸಮಾಲೋಚಿಸಿ, ಚರ್ಚೆಗೆ ಅಗತ್ಯವಿರುವಷ್ಟು ಸಮಯವನ್ನು ನಿಗದಿಪಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಚರ್ಚೆಯ ಪೂರ್ತಿ ಅವಧಿಯಲ್ಲಿ ತಾವು ಸದನದಲ್ಲೇ ಉಪಸ್ಥಿತರಿದ್ದು, ವಿರೋಧ ಪಕ್ಷಗಳು ಎತ್ತುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ. ಅಲ್ಲದೆ, ಪ್ರಸ್ತುತ ಅಧಿವೇಶನದಲ್ಲೇ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026’ ಕುರಿತು ಚರ್ಚೆ ನಡೆದಾಗ ವಿಪಕ್ಷಗಳ ಯಾವುದೇ ಸಂಸದರು ನೀಟ್ ವಿಚಾರವನ್ನು ಎತ್ತಿರಲಿಲ್ಲ ಎಂದೂ ಶಾ ನೆನಪಿಸಿದ್ದಾರೆ.
ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಕುರಿತು ಅಮಿತ್ ಶಾ ಅವರ ‘ಉಪನ್ಯಾಸ’ ನಮಗೆ ಬೇಕಿಲ್ಲ, ಸ್ಪಷ್ಟ ಉತ್ತರ ಬೇಕು ಎಂದು ಕಿಡಿಕಾರಿದ್ದಾರೆ. “ವಿದ್ಯಾರ್ಥಿಗಳ ಮೇಲೆ ಲಠಿ ಪ್ರಹಾರ ಮತ್ತು ಗಾಳಿಯಲ್ಲಿ ಗುಂಡು ಹಾರಿಸಲು ಆದೇಶ ನೀಡಿದ್ದು ಯಾರು? ಈ ದೌರ್ಜನ್ಯಕ್ಕೆ ಹೊಣೆ ಯಾರು?” ಎಂದು ಪ್ರಶ್ನಿಸಿರುವ ರಾಹುಲ್, ಗೃಹ ಸಚಿವ ಅಮಿತ್ ಶಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜುಲೈ 20 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಬೆಂಬಲಿತ ಸಾವಿರಾರು ವಿದ್ಯಾರ್ಥಿಗಳು ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಠಿ ಪ್ರಹಾರ ಹಾಗೂ ಕಣ್ಣೀರು ಅನಿಲ ಪ್ರಯೋಗ ಮಾಡಿದ್ದರು. ಈ ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪೊಲೀಸರ ಅತಿಯಾದ ಬಲಪ್ರಯೋಗದ ವಿರುದ್ಧ ವಿಪಕ್ಷಗಳು ಸತತವಾಗಿ ಧ್ವನಿ ಎತ್ತುತ್ತಿವೆ.
