ನೈರುತ್ಯ ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಿಗದ ಸ್ಥಾನ: ಸಚಿವ ವಿ. ಸೋಮಣ್ಣ ಮಧ್ಯಪ್ರವೇಶಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

ಬೆಂಗಳೂರು: ನೈರುತ್ಯ ರೈಲ್ವೆಯ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ನಡೆಸುವಂತೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಮಾಡಿದ್ದಾರೆ.

ಸಚಿವರಿಗೆ ಬರೆದ ಪತ್ರದಲ್ಲಿ ನಿಖಿಲ್ ಅವರು, ಈ ತಿಂಗಳು ನಡೆಯಲಿರುವ ‘ಗೂಡ್ಸ್ ಟ್ರೈನ್ ಮ್ಯಾನೇಜರ್’ ಹುದ್ದೆಯ ಬಡ್ತಿಗಾಗಿ ನೈರುತ್ಯ ರೈಲ್ವೆಯು ನಡೆಸುವ ಸೀಮಿತ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆಗಳು (LDCE) ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಇವೆ ಎಂದು ಉಲ್ಲೇಖಿಸಿದ್ದಾರೆ. “ಕೇವಲ ಇಂಗ್ಲಿಷ್ ಮತ್ತು ಹಿಂದಿಗೆ ಮಾತ್ರ ಅವಕಾಶ ನೀಡಿರುವುದು ಸ್ಥಳೀಯ ಉದ್ಯೋಗಿಗಳಲ್ಲಿ ಆತಂಕ ಉಂಟುಮಾಡಿದೆ,” ಎಂದು ನಿಖಿಲ್ ತಿಳಿಸಿದ್ದಾರೆ.

ಮುಂದುವರಿದು ಅವರು, 2024ರ ಆಗಸ್ಟ್‌ನಲ್ಲಿ ಇಲಾಖೆಯು ಹೊರಡಿಸಿದ್ದ ಅಧಿಸೂಚನೆಯಲ್ಲಿ ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ. “ನೈರುತ್ಯ ರೈಲ್ವೆಯ ಕೇಂದ್ರ ಕಚೇರಿಯು ಕರ್ನಾಟಕದಲ್ಲಿದ್ದರೂ ಸಹ ಕನ್ನಡವನ್ನು ನಿರ್ಲಕ್ಷಿಸುತ್ತಿರುವುದು ಸ್ವೀಕಾರಾರ್ಹವಲ್ಲ,” ಎಂದು ಅವರು ಹೇಳಿದ್ದಾರೆ.

ಭವಿಷ್ಯದಲ್ಲಿ ಇಂತಹ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಬಗ್ಗೆ ಕಾಯಂ ಸರ್ಕಾರಿ ಆದೇಶವನ್ನು ಹೊರಡಿಸುವಂತೆ ನಿಖಿಲ್ ಅವರು ಸಚಿವರಿಗೆ ಒತ್ತಾಯಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು