Friday, June 14, 2024

ಸತ್ಯ | ನ್ಯಾಯ |ಧರ್ಮ

ಮಣಿಪುರ ಹಿಂಸಾಚಾರದ ಅವಿಶ್ವಾಸ ನಿರ್ಣಯ : ಸಂಸತ್ತಿನಲ್ಲಿ ಮೌನವ್ರತಕ್ಕೆ ಜಾರಿದ ಬಿಜೆಪಿ

ನವದೆಹಲಿ : ಸಂಸತ್ತಿನಲ್ಲಿ ಮಣಿಪುರ ಹಿಂಸಾಚಾರದ ಮೇಲಿನ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಬಿಜೆಪಿ ಸಂಪೂರ್ಣ ಮೌನಕ್ಕೆ ಶರಣಾಗಿದ್ದು ಇಂದಿನ ಅಧಿವೇಶನದಲ್ಲಿ ಸ್ಪಷ್ಟವಾಗಿ ಗೋಚರವಾಗಿದೆ. ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಮೀಸಲಿರಿಸಿದ ಸುಮಾರು 6 ಗಂಟೆ 41 ನಿಮಿಷಗಳ ಅವಧಿಯಲ್ಲಿ ಬಿಜೆಪಿ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳ ಪ್ರಮುಖ ಪ್ರಶ್ನೆಗಳಿಗೆ ಉತ್ತರಿಸಿಲ್ಲ.

ಲೋಕಸಭೆ ಅಧಿವೇಶನದಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಗೆ ಭಾರತೀಯ ಜನತಾ ಪಕ್ಷಕ್ಕೆ ಸುಮಾರು 6 ಗಂಟೆ 41 ನಿಮಿಷಗಳನ್ನು ನಿಗದಿಪಡಿಸಲಾಗಿದೆ. ಪ್ರತಿಪಕ್ಷಕ್ಕೆ ಸುಮಾರು ಒಂದು ಗಂಟೆ 15 ನಿಮಿಷಗಳನ್ನು ನೀಡಲಾಗಿದೆ. ಈ ಚರ್ಚೆಯು ಒಟ್ಟು 12 ಗಂಟೆಗಳ ಕಾಲ ನಡೆಯಲಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಸಂಸತ್ತಿನಲ್ಲಿ ಚರ್ಚೆಗೆ ಚಾಲನೆ ನೀಡಿದರು. INDIA ಮೈತ್ರಿಕೂಟದ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯವನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಳೆದ ವಾರ ಅಂಗೀಕರಿಸಿದ್ದರು.

ಮಣಿಪುರದ ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ ಸಂಸದರು, ‘ಅವಿಶ್ವಾಸ ನಿರ್ಣಯವನ್ನು ಏಕೆ ಮಂಡಿಸಲಾಯಿತು ಎಂಬುದು ಇಡೀ ದೇಶಕ್ಕೆ ತಿಳಿದಿದೆ. ದೇಶದಲ್ಲಿ ಎಲ್ಲಿಯೂ ನಡೆಯದ ಹಿಂಸಾಚಾರ ಮಣಿಪುರದಲ್ಲಿ ನಡೆಯುತ್ತಿದೆ. ಆದ್ದರಿಂದ ಈ ವಿಷಯದ ಬಗ್ಗೆ ಚರ್ಚಿಸುವುದು ಸರ್ಕಾರ ಮತ್ತು ಪ್ರತಿಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

‘ಪ್ರಧಾನಿಯವರು ಇಲ್ಲಿಯವರೆಗೆ ಮಣಿಪುರಕ್ಕೆ ಏಕೆ ಭೇಟಿ ನೀಡಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ಮಣಿಪುರ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಲು ಅವರಿಗೆ 80 ದಿನಗಳು ಏಕೆ ಬೇಕಾಯಿತು? ಇದುವರೆಗೂ ಮಣಿಪುರ ಸಿಎಂ ಅವರನ್ನು ಏಕೆ ತೆಗೆದು ಹಾಕಿಲ್ಲ?’ ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಪ್ರಶ್ನಿಸಿದ್ದಾರೆ. ಅಷ್ಟೆ ಅಲ್ಲದೆ ‘ಮಣಿಪುರದ ಮಹಿಳೆಯರು ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ’ ಎಂದು ಹೇಳಿದರು.

ಆಗಸ್ಟ್ 8 ಮತ್ತು 9 ರಂದು ಎರಡು ದಿನಗಳ ಕಾಲ ಚರ್ಚೆಗಳು ನಡೆಯಲಿದ್ದು, ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು