ಮಾನಹಾನಿ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಸಚಿವ ಶಿವಾನಂದ ಎಸ್. ಪಾಟೀಲ್ ದಾಖಲಿಸಿರುವ ಖಾಸಗಿ ದೂರಿನ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಯತ್ನಾಳ್ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಲಾಗಿದೆ.
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಯತ್ನಾಳ್ ಅವರು ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಶಿವಾನಂದ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು.
ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದ ವಿಚಾರಣೆಯಲ್ಲಿದ್ದು, ಮುಂದಿನ ವಿಚಾರಣೆಯಲ್ಲಿ ಯತ್ನಾಳ್ ಅವರ ಹಾಜರಾತಿ ಮಹತ್ವ ಪಡೆದುಕೊಂಡಿದೆ.
