ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್ ಹಾಗೂ ಅವಾಚ್ಯ ಪದಗಳನ್ನು ಬಳಸಿದ ಆರೋಪದ ಮೇಲೆ ದಾವಣಗೆರೆಯ ಸಾಫ್ಟ್‌ವೇರ್ ಎಂಜಿನಿಯರ್ ನಿತಿನ್ ಮತ್ತು ಬೆಂಗಳೂರಿನ ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ವಿಜಯಲಕ್ಷ್ಮಿ ಅವರ ದೂರಿನ ನಂತರ ತಮ್ಮ ಸಂದೇಶಗಳನ್ನು ಡಿಲೀಟ್ ಮಾಡಿದ್ದರೂ, ಪೊಲೀಸರು ಐಪಿ (IP) ವಿಳಾಸವನ್ನು ಪತ್ತೆಹಚ್ಚುವ ಮೂಲಕ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಕಳೆದ ವಾರ ವಿಜಯಲಕ್ಷ್ಮಿ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 15 ಇನ್‌ಸ್ಟಾಗ್ರಾಮ್ ಐಡಿಗಳು ಮತ್ತು 150ಕ್ಕೂ ಹೆಚ್ಚು ಆಕ್ಷೇಪಾರ್ಹ ಕಾಮೆಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು. ಆದರೆ, ತಮ್ಮ ದೂರಿನ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ಬುಧವಾರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಅವರು, “ಮತ್ತೊಬ್ಬ ಮಹಿಳೆ (ನಟಿ ರಮ್ಯಾ) ನೀಡಿದ ದೂರಿನ ಮೇಲೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳಲಾಗಿದೆ, ಆದರೆ ನನ್ನ ದೂರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಕಾನೂನು ಎಲ್ಲರಿಗೂ ಒಂದೇ ಎಂದು ನಾನು ನಂಬಿದ್ದೆ, ಆದರೆ ಈ ಅನುಭವ ನನ್ನ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ” ಎಂದು ಕಿಡಿಕಾರಿದ್ದರು.
ವಿಜಯಲಕ್ಷ್ಮಿ ಅವರ ಆರೋಪವನ್ನು ತಳ್ಳಿಹಾಕಿದ್ದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ತನಿಖೆ ಪ್ರಗತಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದರು. ಅದರ ಬೆನ್ನಲ್ಲೇ ಇಂದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಉಳಿದ ಕಿಡಿಗೇಡಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.
ಈ ಹಿಂದೆ ನಟಿ ರಮ್ಯಾ ಅವರಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿಗಳನ್ನೂ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಬಂಧಿಸಿದ್ದರು ಎಂಬುದು ಗಮನಾರ್ಹ.
